
Sidlaghatta : ಶಿಡ್ಲಘಟ್ಟ ನಗರದ ಮತ್ತು ತಾಲ್ಲೂಕಿನ ಕೆಲ ಮತಗಟ್ಟೆ ಕೇಂದ್ರಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ಅವರು ಭೇಟಿ ನೀಡಿ ಪ್ರಗತಿ ಪರಿಶೀಲಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ರಾಜ್ಯ ಸರ್ಕಾರದ ಆದೇಶದನ್ವಯ ಪ್ರತಿ ಮಂಗಳವಾರ ಜಿಲ್ಲೆಯ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ನಂತರ ವಿವಿಧ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.
ಮತಗಟ್ಟೆ ಪರಿಶೀಲನೆ :
ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ತ್ವರಿತ ಸೇವೆ ನೀಡಿ ಸಮಸ್ಯೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ನೀಡಿದರು. ತಾಲ್ಲೂಕು ಆಡಳಿತದಲ್ಲಿನ ಸಿಬ್ಬಂದಿಯ ಕೊರತೆ, ಸಾರ್ವಜನಿಕರಿಗೆ ಒದಗಿಸುವ ಸೇವೆ, ಜನರ ಕುಂದು ಕೊರತೆಗಳನ್ನು, ಆಡಳಿತದ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿ ಅದರ ಸುಧಾರಣೆಗೆ ಅಗತ್ಯ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ನಂತರ ಶಿಡ್ಲಘಟ್ಟ ನಗರದ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿವರವನ್ನು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ರಾಜೀವ್, ಪೌರಾಯುಕ್ತ ಶ್ರೀಕಾಂತ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.