Chintamani : ಗುಪ್ತಚರ ಇಲಾಖೆಯಿಂದ ಲಭಿಸಿದ ಮಾಹಿತಿಯ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ 20 ರ ರಾತ್ರಿ 10 ಗಂಟೆಯಿಂದ ಮೇ 23 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ತಾಲ್ಲೂಕು ದಂಡಾಧಿಕಾರಿ ಸುದರ್ಶನ ಯಾದವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಗರವನ್ನು ಅತಿ ಸೂಕ್ಷ್ಮ ಪ್ರದೇಶವಾಗಿ ಗುರುತಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆ, ಶಾಂತಿ ಮತ್ತು ಆಸ್ತಿ-ಪಾಸ್ತಿಗಳ ರಕ್ಷಣೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ನಗರದ ಅಂಜನಿ ಬಡಾವಣೆ, ಎನ್.ಆರ್. ಬಡಾವಣೆ, ವಿನೋಭಾ ಕಾಲೋನಿ, ಕೆ.ಆರ್. ಬಡಾವಣೆ, ಗಜಾನನ ವೃತ್ತ, ಅಜಾದ್ ಚೌಕ್, ಬೆಂಗಳೂರು ವೃತ್ತ, ತಪತೇಶ್ವರ ಕಾಲೋನಿ ಹಾಗೂ ಸರ್ಕಾರಿ ಕಚೇರಿಗಳ ಸುತ್ತಮುತ್ತಲ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023 ರ ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರ ಠಾಣೆಯ ಇನ್ಸ್‌ಪೆಕ್ಟರ್‌ನಿಂದ ನಿಷೇಧಾಜ್ಞೆ ವಿಧಿಸಲು ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿ, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ
ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘನೆಯು ನಡೆದರೆ, ಸಂಬಂಧಪಟ್ಟವರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
