Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ 154ನೇ ಗಾಂಧಿ ಜಯಂತಿ (Gandhi Jayanti) ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ” ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಲು ಅಹಿಂಸಾ ಮಾರ್ಗದಲ್ಲಿ ಗಾಂಧೀಜಿ ಹೋರಾಟ ನಡೆಸಿ ಯಶಸ್ವಿಯಾದರು. ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿ ತೊಡಗಿಸಿಕೊಂಡರು. ಸ್ವದೇಶಿ ಚಳವಳಿ ಕೈಗೊಂಡು ಜನರ ಬದುಕು, ಉದ್ಯೋಗವನ್ನು, ರಾಷ್ಟ್ರ ಪ್ರೇಮವನ್ನು ಇಮ್ಮಡಿಗೊಳಿಸಲು ಶ್ರಮಿಸಿದರು. ಅವರ ಜೀವನವೇ ನಮಗೆ ಒಂದು ಮಾದರಿ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬುದಕ್ಕೆ ಮಾದರಿಯಾಗಿದ್ದವರು ಶಾಸ್ತ್ರಿ. ಅವರು ಪ್ರಾಮಾಣಿಕತೆ, ಸರಳತೆಗೆ, ದಕ್ಷ ಕಾರ್ಯವೈಖರಿಗೆ ಹೆಸರಾದವರು. ರಾಜಕೀಯ ಪದವಿಯಲ್ಲಿದ್ದಾಗ ತಮ್ಮ ಕುಟುಂಬ ನಿರ್ವಹಿಸಿ ಉಳಿದ ಹಣವನ್ನು ಸರ್ಕಾರಕ್ಕೆ ಮರುಪಾವತಿಸಿದ ಪ್ರಾಮಾಣಿಕ ರಾಜಕಾರಣಿ ಹಾಗೂ ರೈಲು ಅಪಘಾತ ಆದಾಗ ಮಂತ್ರಿ ಸ್ಥಾನವನ್ನೇ ತೊರೆದ ಮಹನೀಯರು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಎಂ.ಆರ್.ಮಂಜುನಾಥ, ತಹಶೀಲ್ದಾರ್ ಅನಿಲ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.