Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ 2023ರ ವಿಧಾನಸಭೆ ಚುನಾವಣೆ (2023 Karnataka Assembly Election) ಕುರಿತು ಪೂರ್ವ ಸಿದ್ಧತೆಗಳ ಸಭೆ (Preparatory Meeting) ನಡೆಸಲಾಯಿತ್ತು.
ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ( N M Nagaraj) “ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾದರೂ ನಾವು ಸಕಲ ಸಿದ್ಧರಿರುವ ನಿಟ್ಟಿನಲ್ಲಿ ಎಲ್ಲ ವ್ಯವಸ್ಥೆಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಮಾಡಿಕೊಳ್ಳಲಾಗಿದೆ. ಅದರಂತೆ ಜಿಲ್ಲಾ ಮಟ್ಟದ 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಮತಗಟ್ಟೆಗಳಿಗೆ ಬೇಕಾದ ಮೂಲ ಸೌಕರ್ಯ ಕಲ್ಪಿಸುವುದು, ಸ್ವೀಪ್ ಚಟುವಟಿಕೆಗಳನ್ನು ಮಾಡುವುದು, ಇವಿಎಂ ಯಂತ್ರಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಿ ಪೂರ್ವ ಪ್ರಾಯೋಗಿಕವಾಗಿ ಬಳಸುವಂತೆ ಮಾಡುವುದು. ತಮ್ಮ ಅಧೀನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ನೀಡುವ ಎಲ್ಲ ಕಾರ್ಯಗಳನ್ನು ಮೇಲುಸ್ತುವಾರಿ ಮಾಡಬೇಕು. ಸೂಸೂತ್ರವಾಗಿ ಚುನಾವಣಾ ಕಾರ್ಯಗಳು ನಡೆಯುವಂತೆ ಸದಾ ಜಾಗೃತರಾಗಿರಬೇಕು” ಎಂದು ತಿಳಿಸಿದರು.
ಚುನಾವಣೆಗಳು ಸುಲಲಿತವಾಗಿ ಜರುಗಬೇಕಾದರೆ ನೆರೆ ಜಿಲ್ಲೆಗಳು ಮತ್ತು ಜಿಲ್ಲೆಗೆ ಹೊಂದಿಕೊಂಡಿರುವ ಹೊರ ರಾಜ್ಯದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಅಗತ್ಯವಿರುವುದರಿಂದ ಜಿಲ್ಲೆಗೆ ಹೊಂದಿಕೊಂಡಿರುವ ಹೊರ ರಾಜ್ಯದ ಜಿಲ್ಲೆಗಳ ಪೊಲೀಸ್, ಅಬಕಾರಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.