Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಅಸಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ಭಾನುವಾರ ವಿಶ್ವ ಕ್ಯಾನ್ಸರ್ ದಿನಾಚರಣೆ (World Cancer Day) ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ” ಕ್ಯಾನ್ಸರ್ ಎನ್ನುವುದು ಮಾರಣಾಂತಿಕ ಕಾಯಿಲೆ. ಇದನ್ನು ಪ್ರಾರಂಭದಲ್ಲೇ ಗುರುತಿಸಿದರೆ ಚಿವುಟಿ ಹಾಕಬಹುದು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್, ಶ್ವಾಸಕೋಶ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಪುರುಷರಲ್ಲಿಯು ಸಹ ಹೀಗೆ ಹಲವಾರು ರೀತಿಯ ಕ್ಯಾನ್ಸರ್‌ಗಳು ಕಂಡುಬರುತ್ತವೆ. ಇವುಗಳಿಗೆ ಕಡಿವಾಣಹಾಕಬೇಕು ಎಂದರೆ ಯೋಗ. ಉತ್ತಮ ಆಹಾರದ ಅಭ್ಯಾಸಗಳು, ವ್ಯಾಯಾಮ, ನಡಿಗೆ, ವೈದ್ಯರು ನೀಡುವ ಆಹಾರ ಪದ್ಧತಿಯ ಸಲಹೆಗಳು ಪಾಲಿಸುವ ಜತೆಗೆ ಸಕಾಲದಲ್ಲಿ ಆರೋಗ್ಯ ಪರೀಕ್ಷೆ ಮಾಡಿಸಬೇಕು ಭಾರತದಲ್ಲಿ ಅನೇಕ ಜನರು ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಅದರಲ್ಲೂ ಸೆಲೆಬ್ರಿಟಿಗಳಾದ ಯುವರಾಜ್ ಸಿಂಗ್ ಮತ್ತು ಸೋನಾಲಿ ಬೇಂದ್ರೆ ಸಹ ಕ್ಯಾನ್ಸರ್ ವಿರುದ್ಧ ಹೋರಾಡಿ ಜಯಿಸಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ವೈದ್ಯ ಡಾ.ರಮೇಶ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜಿ.ಹರೀಶ್, ತಾಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ಪತಂಜಲಿ ಟ್ರಸ್ಟ್ ಸದಸ್ಯರು, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು,ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.