Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಲುವಾಗಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ (Kannada Rajyotsava) ದಿನ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ (Plastic free campaign) ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (M C Sudhakar) ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು “ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದ್ದು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಮನವೊಲಿಸುವ ಕೆಲಸ ಮಾಡಲಾಗಿದೆ. ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಾಮಾಜಿಕ ಮಾಧ್ಯಮಗಳನ್ನು ಬಳಕೆ ಮಾಡಿಕೊಂಡು ಕಿರುಚಿತ್ರ, ಸಾಕ್ಷ್ಯಚಿತ್ರಗಳನ್ನು ಬಿತ್ತರಿಸಿ ಅರಿವು ಮೂಡಿಸಲಾಗುವುದು ಮತ್ತು ಜಿಲ್ಲೆಯನ್ನು ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಕುರಿತು ಜಾಹೀರಾತು ಫಲಕಗಳನ್ನು ಅಳವಡಿಸಲಾಗುತ್ತದೆ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.