Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ CET ಪರೀಕ್ಷಾ ಪೂರ್ವಭಾವಿ ಸಿದ್ದತಾ ಸಭೆ (Preliminary Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಜಿಲ್ಲೆಯಾದ್ಯಂತ 16 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 18 ಮತ್ತು 19 ರಂದು ನಡೆಯಲಿರುವ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸಿದ್ದತೆ ಕೈಗೊಳ್ಳಬೇಕು. ಸಿಇಟಿ ಪರೀಕ್ಷೆ ಬರೆಯಲು 7,211 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಪರೀಕ್ಷೆ ಬರೆಯಲು ಪೂರಕ ವಾತಾವರಣ ಸೃಷ್ಟಿಸುವುದು ನಮ್ಮ ಜವಾಬ್ದಾರಿ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಕೇಂದ್ರಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು, ಆಸನ, ಬೆಳಕು, ಶೌಚಾಲಯ ವ್ಯವಸ್ಥೆ ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ದಿನ ವಿದ್ಯುತ್ ವ್ಯತ್ಯಯ ಆಗದಂತೆ ಬೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು” ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ ಖಾಸಿಂ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಜಿಲ್ಲಾ ಖಜಾನೆ ಉಪನಿರ್ದೇಶಕ ಎಂ.ಮಂಜುನಾಥ್ ಸಭೆಯಲ್ಲಿ ಪಾಲ್ಗೊಂಡಿದ್ದರು.