Cheemangala, Sidlaghatta : ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದಾರೆ. ಅವರಿಗೆ ಕಷ್ಟದ ಅರಿವು ಇರುತ್ತದೆ. ಗ್ರಾಮೀಣ ಮಕ್ಕಳಿಗೆ ಪ್ರೋತ್ಸಾಹ ಮತ್ತು ಸಹಕಾರ, ಆತ್ಮಸ್ಥೈರ್ಯ ತುಂಬಿದರೆ ಅವರು ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಎಂಜಿನಿಯರ್ ಬಿ.ಚಂದ್ರಕಾಂತ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಸೋಮವಾರ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ, ಗುರುವಂದನ ಹಾಗೂ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಧಕೋ ವಿದ್ಯೆ ಬಾಧಕೋ ದ್ರವ್ಯ ಎಂಬ ಮಾತನ್ನು ವಿದ್ಯಾರ್ಥಿಗಳು ತಿಳಿಯಬೇಕು. ಪರಿಶ್ರಮದಿಂದ ಮಾತ್ರ ಯಶಸ್ಸು ಸಿದ್ಧಿಸುತ್ತದೆ. ವಿದ್ಯಾವಂತರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಭಾವನಾತ್ಮಕ ದೃಶ್ಯಗಳು ಕಂಡು ಬಂದವು. ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳ ಪಾದಗಳಿಗೆ ನಮಸ್ಕರಿಸಿ ಗುರುವಂದನೆ ಸಲ್ಲಿಸಿದರು. ಹಳೇ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವವನ್ನು ಕಂಡ ಶಿಕ್ಷಕರು ಭಾವುಕರಾಗಿ ತಮ್ಮ ಶಿಷ್ಯರಿಗೆ ಆಶೀರ್ವದಿಸಿದರು.
ಅದೇ ರೀತಿ ಶಾಲೆಯ ಪುಟಾಣಿಗಳು ಸಹ ತಮ್ಮ ನೆಚ್ಚಿನ ಗುರುಗಳಿಗೆ ಗುರುವಂದನೆ ಸಲ್ಲಿಸುವ ಮೂಲಕ ಗಮನಸೆಳೆದರು. ಕಾರ್ಯಕ್ರಮದಲ್ಲಿ ಸಿ ಆರ್ ಪಿ ಗಳಾಗಿ ಸೇವೆ ಸಲ್ಲಿಸಿದ ಶಿಕ್ಷಕರಿಗೂ ಸಹ ಸನ್ಮಾನಿಸಲಾಯಿತು. ಒಟ್ಟಾರೆ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಆಯೋಜಿಸಿದ ಹಳೆ ವಿದ್ಯಾರ್ಥಿಗಳು ಎಲ್ಲರ ಪ್ರೀತಿಗೆ ಪಾತ್ರರಾದರು.
ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಬಿ.ಆರ್.ಸಿ ಸಮನ್ವಯಾಧಿಕಾರಿ ತ್ಯಾಗರಾಜ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ನಿಕಟಪೂರ್ವ ಅಧ್ಯಕ್ಷ ಸಿ.ಎಂ. ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಮ್ಮ,ಪಿಡಿಓ ತನ್ವೀರ್ ಅಹಮದ್, ಹಳೆ ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರು ಗ್ರಾಮಸ್ಥರು ಹಾಜರಿದ್ದರು.