Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸ್ವಗ್ರಾಮ ಪೆರೇಸಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಗುರುವಾರ ಪಕ್ಷದ ಬಲಪ್ರದರ್ಶನ ನಡೆಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಕೊರೊನಾ ಸಂಕಷ್ಟಕ್ಕೆ ತುತ್ತಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪಾದಯಾತ್ರೆ ಕಾರ್ಯಕ್ರಮವನ್ನು ಕೆಪಿಸಿಸಿ ಸದಸ್ಯ ಹಾಗೂ ಜಿಎಚ್‌ಎನ್ ಫೌಂಡೇಶನ್‌ನ ವಿನಯ್ ಶ್ಯಾಮ್ ಆಯೋಜಿಸಿದ್ದರು
ಪೆರೇಸಂದ್ರ ಕ್ರಾಸ್ ಬಳಿ ಆಯೋಜಿಸಿದ್ದ ಬಹಿರಂಗಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೊದಲಿನಿಂದಲೂ ಬಿಜೆಪಿ ಸರ್ಕಾರದಿಂದ ಬೆಳೆದು ಬಂದವರು ಕಾಂಗ್ರೆಸ್ ವಿರುದ್ಧ ಆರೋಪ ಮಾಡಲಿ, ಅದು ಬಿಟ್ಟು ಪಕ್ಷ ಬಿಟ್ಟು ಹೋಗಿ ಪಕ್ಷ ಸೇರಿಕೊಂಡು ಆರೋಪ ಮಾಡುವುದು ಸರಿಯಲ್ಲ. ಕಾಂಗ್ರೆಸ್‌ನಲ್ಲಿಯೇ ಇದ್ದು ಬೆಳೆದವರು ಈಗ ಕಾಂಗ್ರೆಸ್ ಏನು ಮಾಡಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಏನು ಮಾಡಿದೆ ಎನ್ನುವುದು ಅವರು ಮರೆಯಬಾರದು ಎಂದರು.
ಸ್ವತಂತ್ರ್ಯ ಹುಟ್ಟಿದ ನಂತರ ಬಿಜೆಪಿ ಸರ್ಕಾರ ಹುಟ್ಟಿದ್ದು, ಸ್ವತಂತ್ರ್ಯ ಪೂರ್ವದಿಂದ ಕಾಂಗ್ರೆಸ್ ಪಕ್ಷ ಇದೆ. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಪಡಿಸಲು ಬಂದಿದ್ದೇವೆ, ಬೇರೊಬ್ಬರ ಬಗ್ಗೆ ಮಾತನಾಡಲು ಬಂದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಒಳ್ಳೆಯ ಆಡಳಿತ ನೀಡಿದ್ದೇವೆ. ಎಚ್.ಎನ್.ವ್ಯಾಲಿ ಮತ್ತು ಎತ್ತಿನಹೊಳೆ ನೀರಾವರಿ ಯೋಜನೆಗೆ ಮಾನ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಾವಿರಾರೂ ಕೋಟಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ನೀಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯಿತು. ಆದರೆ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಜಿಲ್ಲೆಯಲ್ಲಿ ಕಾಮಗಾರಿ ನಡೆಯುತ್ತಲೇ ಇಲ್ಲ. ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಬಿಜೆಪಿ ಸರ್ಕಾರ ಮಾಡುತ್ತಿರುವುದು ಘೋರ ಅಪರಾಧ, ವೃಷಭಾವತಿ ನೀರು ಹರಿಸುವ ವಿಚಾರದಲ್ಲಿಯೂ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅನ್ಯಾಯವಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಏಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಕೇಳುತ್ತಲೇ ಇಲ್ಲ. ಬಿಜೆಪಿ ಸರ್ಕಾರ ಬಂದ ಮೇಲೆ ಬಡವರಿಗೆ ತೊಂದರೆಯಾಗಿದೆ. ಇಂತಹ ಸರ್ಕಾರ ನಮಗೆ ಬೇಡ, ಬಿಜೆಪಿ ಸರ್ಕಾರ ತೊಲಗಿಸಿ ಕಾಂಗ್ರೆಸ್ ಸರ್ಕಾರವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಂತೆ ಮಾಡಿ. ಮುಂದಿನ ಗ್ರಾ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿಗೆ ಬುದ್ದಿ ಕಲಿಸಬೇಕು ಎಂದು ಹೇಳಿದರು.
ಶಾಸಕ ಶಿವಶಂಕರರೆಡ್ಡಿ, ಶಾಸಕ ಸುಬ್ಬಾರೆಡ್ಡಿ, ಮುಖಂಡ ಮಧು ಬಂಗಾರಪ್ಪ, ಶಾಸಕ ವಿ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಸುಮಿತ್ರಮ್ಮ, ಮುಖಂಡರಾದ ಯಲುವಳ್ಳಿ ರಮೇಶ್, ಅಡ್ಡಗಲ್ ಶ್ರೀಧರ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.