Chikkaballapur : ಚಿಕ್ಕಬಳ್ಳಾಪುರ ನಗರದ ಹೊರವಲಯದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಮಾತನಾಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ರೂಪಿಸಲಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸುವ ಉದ್ದೇಶದಿಂದ ಪ್ರವಾಸ ಕೈಗೊಳ್ಳಲಾಗಿದ್ದು, ಗಂಗಾ ಕಲ್ಯಾಣ ಯೋಜನೆಯ ವಿಚಾರಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದಂತೆ ಸ್ವಲ್ಪ ಮಟ್ಟಿಗೆ ಸಮಸ್ಯೆಗಳಿವೆ. ಅವನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಜಿಲ್ಲಾ ಪ್ರಗತಿ ಪರಿಶೀಲನೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಖುದ್ದು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
2019-೨೦ ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಆದರೆ ಪ್ರಕರಣ ನ್ಯಾಯಾಲಯದಲ್ಲಿರುವ ಕರಣ ವಿಳಂಬವಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಪಟ್ಟಿದೆ ಸೇರಿಸಲು ೧೫ ಜಾತಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಪಂಚಮಶಾಲಿಯವರನ್ನು 2A ಗೆ ಸೇರಿಸುವುದರ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ಸಾರ್ವಜನಿಕ ಅಹವಾಲು ಮುಗಿದಿದೆ. ಉಳಿದ 14 ಜಾತಿಗಳ ಸಾರ್ವಜನಿಕ ಅಹವಾಲನ್ನು ಅಕ್ಟೊಬರ್ 11 ರಂದು ಪರಿಗಣಿಸಲಾಗುವುದು. ಆದಷ್ಟು ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸುವ ಕೆಲಸವನ್ನು ಮಾಡಲಾಗುವುದು ಎಂದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಕಲ್ಯಾಣ್ ಕುಮಾರ್, ರಾಜಶೇಖರ್, ಕೆ.ಟಿ.ಸುವರ್ಣ, ಅರುಣ್ ಕುಮಾರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.