Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡೆಂಗಿ ಜ್ವರ ನಿಯಂತ್ರಣ (Dengue Control Taskforce Meeting) ಕುರಿತ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ” ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಂಭವವಿದ್ದು ಡೆಂಗಿ ಜ್ವರ ಉಲ್ಬಣ ಆಗುವ ಸಾಧ್ಯತೆ ಇದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಸೊಳ್ಳೆ ನಿರೋಧಕಗಳನ್ನು ಬಳಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಸ್ಥಳೀಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಣ, ಕಾರ್ಮಿಕ ಇಲಾಖೆ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಸಮಾಜ ಕಲ್ಯಾಣ ಇಲಾಖೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಲಾರ್ವಾ ಸಮೀಕ್ಷೆ ಕೈಗೊಂಡು ಸೊಳ್ಳೆಗಳ ನಿಯಂತ್ರಣಕ್ಕೆ ಪ್ರತಿನಿತ್ಯ ನಿಗಾವಹಿಸಿ ಮುಂದಿನ ದಿನಗಳಲ್ಲಿ ಈ ಪ್ರಕರಣಗಳು ಹೆಚ್ಚಾಗದಂತೆ ಸ್ವಚ್ಛತೆಯ ಮುನ್ನೆಚ್ಚರಿಕಾ ಕ್ರಮಗಳಿಗ ಮುಂದಾಗಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ಮಂಜುಳಾ ದೇವಿ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.