Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ (Nandi) ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮಕ್ಕೆ ಸೋಮವಾರ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ಭೇಟಿ ನೀಡಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಚಾಲನೆ ನೀಡುವ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸ್ಥಳ ಪರಿಶೀಲನೆ ನಡೆಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ ” ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ’ಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮದಲ್ಲಿ ಚಾಲನೆ ನೀಡಲಿದ್ದಾರೆ. 977 ಜನಸಂಖ್ಯೆಯುಳ್ಳ ಈ ಕುಗ್ರಾಮಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ ಇತರೆ ದಾಖಲೆಗಳನ್ನು ಖುದ್ದಾಗಿ ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಿದ್ದಾರೆ. . ಈ ಹಿನ್ನೆಲೆಯಲ್ಲಿ ಅಂದು ನಡೆಯುವ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಗುರುತಿಸಿ ವೇದಿಕೆ ಸಿದ್ಧತೆಗಾಗಿ ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್, ಪಿಡಿಒ ಮಂಜುನಾಥ್, ಸ್ಥಳೀಯ ಪ್ರತಿನಿಧಿಗಳು, ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.