Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ‘ರಾಷ್ಟ್ರೀಯ ಮತದಾರರ ದಿನಾಚರಣೆ’ (National Voter’s Day) ಯ ಪೂರ್ವಭಾವಿ ಸಭೆಯನ್ನು (Preliminary Meeting) ನಡೆಸಲಾಯಿತು.
ಯುವಜನರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಜ.25ರಂದು ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಭಿತ್ತಿಪತ್ರ, ರಸ ಪ್ರಶ್ನೆ ಹಾಗೂ ಚರ್ಚಾ ಸ್ಪರ್ಧೆ, ಪದವಿ, ಸ್ನಾತಕೋತ್ತರ, ತತ್ಸಮಾನ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ರೀಲ್ಸ್ ಚಟುವಟಿಕೆ ಆಯೋಜಿಸಬೇಕು. ಎಲ್ಲ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಬೇಕು. ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಜ.24 ರಂದು ಕಡ್ಡಾಯವಾಗಿ ಪ್ರತಿಜ್ಞಾವಿಧಿ ಬೋಧಿಸಿ ರಾಷ್ಟ್ರೀಯ ಮತದಾರ ದಿನ ಆಚರಿಸಬೇಕು” ಎಂದು ಹೇಳಿದರು.
ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಈಶ್ವರಪ್ಪ, ತಹಶೀಲ್ದಾರ್ ಕೆ.ಶ್ವೇತಾ, ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.