Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಪೊಲೀಸ್ ಇಲಾಖೆ, ಸೈಬರ್ ಕಾನೂನು ಹಾಗೂ ಫೋರೆನ್ಸಿಕ್ ರಾಷ್ಟ್ರೀಯ ಕಾನೂನು ಶಾಲೆ ಸಹಯೋಗದಲ್ಲಿ ಸೈಬರ್ ಅಪರಾಧಗಳ ತನಿಖೆಯ ಬಗ್ಗೆ ಕಾರ್ಯಾಗಾರದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾನೂನು ಸಲಹೆಗಾರ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ತಿದ್ದುಪಡಿ ಕಾಯ್ದೆಗಳ ಬಗ್ಗೆ, ಪೊಲೀಸ್ ನಿಯಮಗಳು ಮತ್ತಿತರ ಇಲಾಖಾ ವಿಚಾರಣೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಹಾಗೂ ಸೈಬರ್ ಅಪರಾಧಗಳು, ಸೈಬರ್ ಕ್ರೈಂ ಪತ್ತೆ ಹಚ್ಚುವುದು, ಸಾಕ್ಷ್ಯ ಸಂಗ್ರಹಣೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಸೈಬರ್ ಅಪರಾಧಗಳ ಬಗ್ಗೆ ಜನರು ಎಚ್ಚರವಹಿಸಬೇಕು. ಅನಗತ್ಯವಾಗಿ ಕರೆಗಳಿಗೆ ಪ್ರತಿಕ್ರಿಯಿಸುವುದು ಮತ್ತು ಎಟಿಎಂ/ಡೆಬಿಟ್ ಕಾರ್ಡ್ ಸಂಖ್ಯೆಗಳನ್ನು ಬೇರೆಯವರಿಗೆ ಕೊಡಬಾರದು. ಮೊಬೈಲ್‌ಗೆ ಯಾವುದೇ ಅನಗತ್ಯ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.
ಡಿವೈಎಸ್‌ಪಿ ಕುಶಾಲ್ ಚೌಕ್ಸಿ, ವಾಸುದೇವ್ ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.