Chikkaballapur : ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಡೆದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಅರಿವು ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎಸ್.ನಟರಾಜ್ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾತನಾಡಿದ ನ್ಯಾಯಾಧೀಶರು ” ಯಾವುದೇ ತಾರತಮ್ಯ ಇಲ್ಲದೆ ಮಹಿಳೆಯರ ರಕ್ಷಣೆಯಾಗಬೇಕು. ಶಾಲಾ, ಕಾಲೇಜು, ಸಂಘಟಿತ ಮತ್ತು ಅಸಂಘಟಿತ ವಲಯ, ವಾಣಿಜ್ಯ ಸಂಸ್ಥೆಗಳು, ಗಾರ್ಮೆಂಟ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ, ದೌರ್ಜನ್ಯ ಖಂಡನೀಯ. ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದು ಅಪರಾಧ ವಾಗಿದೆ. ಮಾಧ್ಯಮಗಳಲ್ಲಿ ಕಿರುಕುಳ ಅಥವಾ ಅತ್ಯಾಚಾರಕ್ಕೆ ಒಳಗಾದವರ ವೈಯಕ್ತಿಕ ವಿವರ ಪ್ರಕಟಿಸಬಾರದು” ಎಂದು ಹೇಳಿದರು.
ಕಾನೂನಿನ ಮುಂದೆ ಎಲ್ಲರೂ ಸಮಾನರು, ಮಕ್ಕಳು ಮತ್ತು ಮಹಿಳೆಯರಿಗಾಗಿ ಇರುವ ಕಾಯ್ದೆಗಳ ಸದ್ಬಳಕೆಯಾಗಬೇಕೇ ಹೊರತು ದುರ್ಬಳಕೆ ಆಗಬಾರದು. ಮಕ್ಕಳಿಗೆ ಒಳ್ಳೆಯ ಮತ್ತು ಕೆಟ್ಟ ಸ್ಪರ್ಶ ಬಗ್ಗೆ ಅರಿವಿರಬೇಕು. ಮಕ್ಕಳಿಗೆ ಯಾವುದೇ ಸಮಸ್ಯೆ ಇದ್ದರೆ 1098 ಗೆ ಕರೆ ಮಾಡಿ ತಿಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಒದಗಿಸುತ್ತಾರೆ. ಮಹಿಳೆ ಕೆಲಸ ಮಾಡುವ ಎಲ್ಲ ಕಡೆಯೂ ಮಹಿಳೆಯರಿಗಾಗಿ ಇರುವ ಕಾನೂನು ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
ಮಕ್ಕಳ ಭಿಕ್ಷಾಟನೆ ನಿಲ್ಲಿಸಿ ಎಂಬ ಕರಪತ್ರವನ್ನು ಗಣ್ಯರು ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ಮಕ್ಕಳ ಪಾಲನಾ ಅಭಿನಂದನ ಪ್ರಶಸ್ತಿಯನ್ನು ವಸತಿ ನಿಲಯಗಳ ಮೇಲ್ವಿಚಾರಕರಿಗೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ನ್ಯಾಯಾಧೀಶರಾದ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸಿ.ಅಶ್ವತ್ಥಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್, ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಕಾನೂನು ಪರಿವೀಕ್ಷಣಾಧಿಕಾರಿ ರಾಮೇಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಎನ್.ಮಹೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.