Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಗುರುವಾರ ‘ಬಾಲ್ಯವಿವಾಹ ನಿಷೇಧಾಧಿಕಾರಿ ತರಬೇತಿ ಕಾರ್ಯಾಗಾರ’ (Child Marriage Prohibition Officer Training Workshop) ಆಯೋಜಿಸಲಾಗಿತ್ತು.
ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಿ.ರಾಜಶೇಖರ್ “ಬಾಲ್ಯ ವಿವಾಹಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸಮಾಜದಲ್ಲಿ ಈ ಮೌಢ್ಯವನ್ನು ಸಂಪೂರ್ಣ ತೊಡೆದುಹಾಕಲು ಪ್ರತಿಯೊಬ್ಬರು ಕೈಜೋಡಿಸಬೇಕು. ಗ್ರಾಮೀಣ ಭಾಗದಲ್ಲಿ ಹಾಗೂ ಸಾಮೂಹಿಕವಾಗಿ ನಡೆಯುವ ವಿವಾಹಗಳ ಮೇಲೆ ಅಧಿಕಾರಿಗಳು ಹೆಚ್ಚು ನಿಗಾವಹಿಸಿ ಬಾಲ್ಯ ವಿವಾಹಗಳು ನಡೆಯುವುದು ಕಂಡು ಬಂದಲ್ಲಿ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮವಹಿಸಬೇಕು. ಬಾಲ್ಯ ವಿವಾಹವನ್ನು ನಿರ್ಮೂಲನೆ ಮಾಡಲು ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು” ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸಿ.ಅಶ್ವತ್ಥಮ್ಮ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮರಾಜ್ ಅರಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.