Chintamani: ಚಿಂತಾಮಣಿ-ಮದನಪಳ್ಳಿ ರಾಜ್ಯ ಹೆದ್ದಾರಿಯ ದಂಡುಪಾಳ್ಯ ಗೇಟ್ ಸಮೀಪ ಶನಿವಾರ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮೃತರನ್ನು ಚಿಂತಾಮಣಿಯ ಗಾಂಧಿನಗರದ ದೇವರಾಜ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕಡಪಾ ಕಡೆಗೆ ತೆರಳುತ್ತಿದ್ದ ಕಾರು, ಎದುರಿಗೆ ಚಿಂತಾಮಣಿಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಡಿಕ್ಕಿಯ ತೀವ್ರತೆಗೆ ಸವಾರ ದೇವರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಡಿಕ್ಕಿಯ ಪರಿಣಾಮವಾಗಿ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು.
ಅಪಘಾತದಿಂದ ಕಾರಿನ ಮುಂಭಾಗ ಜಖಂಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನೂಕುಲತೆ ಕಲ್ಪಿಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.