Chintamani : ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಕೋನಪಲ್ಲಿ ಗ್ರಾಮದಲ್ಲಿ ಸಂಪ್ರದಾಯದಂತೆ ರಾಮನವಮಿಯ ಮಾರನೆಯ ದಿನ ಕೊದಂಡರಾಮಸ್ವಾಮಿ ಬ್ರಹ್ಮರಥೋತ್ಸವವು (Kodandaramaswamy Brahmarathotsava) ಅದ್ದೂರಿಯಾಗಿ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ರಥೋತ್ಸವದಲ್ಲಿ ಈ ವರ್ಷ ಜನರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು.
ವಿದ್ಯುತ್ ದೀಪಗಳಿಂದ ದೇವಾಲಯದ ಒಳಗೆ ಮತ್ತು ಹೊರಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಹೋಮ, ಹವನ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಉತ್ಸವ ಮೂರ್ತಿಯನ್ನು ತಂದು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ದೇವಾಲಯ ಟ್ರಸ್ಟ್ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.