Chintamani : ಚಿಂತಾಮಣಿ ನಗರದ ಸಮಗ್ರ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಚಿಂತಾಮಣಿಯಲ್ಲಿ ವೈದ್ಯಕೀಯ ಕಾಲೇಜು (Medical College) ಮತ್ತು ನರ್ಸಿಂಗ್ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಾಗಲೇ 10-15 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಘೋಷಿಸಿದರು.
ನಗರದ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರವನ್ನು ₹5 ಕೋಟಿ ವೆಚ್ಚದಲ್ಲಿ ತಾಂತ್ರಿಕವಾಗಿ ಉನ್ನತೀಕರಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಕಾರ್ಪೋರೇಟ್ ಶೈಲಿಯ ವೈದ್ಯಕೀಯ ಸೌಲಭ್ಯ ನೀಡುವ ಉದ್ದೇಶದಿಂದ ₹50-60 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಕ್ರಿಟಿಕಲ್ ಕೇರ್ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
“ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಕಟ್ಟಡ ನಿರ್ಮಾಣವಾದರೆ ಸಾಲದು, ಅಲ್ಲಿನ ನಿರ್ವಹಣೆ ಮುಖ್ಯ. ಇದಕ್ಕಾಗಿ ವಿಶೇಷ ವಾರ್ಡ್‌ಗಳನ್ನು ತೆರೆದು ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು. ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಈಗಾಗಲೇ 2-3 ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ವೈದ್ಯಕೀಯ ಸಚಿವರೊಂದಿಗೂ ಚರ್ಚಿಸಲಾಗಿದೆ,” ಎಂದು ಸಚಿವರು ಮಾಹಿತಿ ನೀಡಿದರು.
ತಮ್ಮ ಕುಟುಂಬದ ಮೂರು ತಲೆಮಾರುಗಳಿಂದ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಸ್ಮರಿಸಿದ ಸಚಿವರು, ಮುಂದಿನ 50 ವರ್ಷಗಳ ದೂರದೃಷ್ಟಿಯನ್ನು ಇಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು. ಹಳೆಯ ಚಿತಾಗಾರದಿಂದ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ಮನಗಂಡು, ಬೆಂಗಳೂರಿನ ತಜ್ಞರ ವಿನ್ಯಾಸದಂತೆ ಆಧುನಿಕ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು.
