Chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳಲ್ಲಿ 18 ಗ್ರಾಮ ಪಂಚಾಯಿತಿಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲನೆಯ ಡೋಸ್ ಲಸಿಕೆ ನೀಡಲಾಗಿದೆ. ಸೆ.17ರ ಒಳಗೆ ಎಲ್ಲ ಗ್ರಾಮಗಳಲ್ಲಿಯೂ ಮೊದಲನೆ ಡೋಸ್ ಲಸಿಕೆಯನ್ನು ಶೇ 100ರಷ್ಟು ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಸಲಾಗುತ್ತಿದೆ. ಕೋವಿಡ್ ಲಸಿಕೆ ಕೊರತೆ ಇಲ್ಲ. ಪ್ರತಿನಿತ್ಯ ನಗರ ಮತ್ತು ಗ್ರಾಮೀಣ ಪ್ರದೇಶದ 100ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳಲ್ಲಿ ಸರಾಸರಿ 15 ರಿಂದ 20 ಸಾವಿರ ಡೋಸ್ ಲಸಿಕೆ ನೀಡಲಾಗುತ್ತಿದೆ ಹಾಗೂ ಲಸಿಕಾ ಉತ್ಸವಗಳಲ್ಲಿ ಪ್ರತಿದಿನ 30 ಸಾವಿರಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಸೆ.11 ರ ಮಾಹಿತಿಯಂತೆ 7,29,324 ಜನರಿಗೆ ಮೊದಲನೇ ಡೋಸ್ ಹಾಗೂ 2,54,892 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 9,78,574 ಲಸಿಕೆಗಳನ್ನು ಜಿಲ್ಲೆಯಾದ್ಯಂತ ಈವರೆಗೆ ನೀಡಲಾಗಿದೆ. ಶೇ75.75 ರಷ್ಟು ಮೊದಲನೆ ಡೋಸ್ ನೀಡಿ ಗುರಿ ಸಾಧಿಸಲಾಗಿದೆ. ಮೊದಲನೆ ಡೋಸ್ ಲಸಿಕೆಯನ್ನು ಪಡೆದು ಎರಡನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುವ ಪೈಕಿ ಶೇ 76 ರಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಯಾವುದೇ ಕೋವಿಡ್ ಪ್ರಕರಣಗಳು ದಾಖಲಾಗಿಲ್ಲ. ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಲಸಿಕಾ ಕಾರ್ಯ ಯಶಸ್ವಿಯಾಗಿ ಮುಂದುವರಿಯುತ್ತಿದೆ ಎಂದು ತಿಳಿಸಿದರು.