Chikkaballapur : ಬರ ಪರಿಹಾರ ಹಾಗೂ ಬೆಳೆ ವಿಮೆ ಪರಿಹಾರ ನೀಡಲು (Crop Insurance) ವಿಳಂಬ (Delay) ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ (Farmer Protest) ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಮಳೆ, ಬೆಳೆ ಇಲ್ಲ. ಸರ್ಕಾರವು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಒಂಬತ್ತು ತಿಂಗಳು ಕಳೆದರೂ ಇದುವರೆಗೂ ಖಾಸಗಿ ವಿಮಾ ಕಂಪನಿಗಳು ರೈತರಿಗೆ ಬೆಳೆ ವಿಮೆ ಪರಿಹಾರ ನೀಡಿಲ್ಲ ಎಂದು ರೈತ ಸಂಘದ ಕಾರ್ಯಕರ್ತರು ಆರೋಪಿಸಿ ವಿಮಾ ಕಂಪನಿಗಳ ವಿರುದ್ಧ ಧಿಕ್ಕಾರ ಕೂಗಿದರು. ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಮೂಲಕ ರೈತ ಸಂಘದ ಸದಸ್ಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಆರ್.ಲಕ್ಷ್ಮಿನಾರಾಯಣ್” ಕೂಡಲೇ ಬೆಳೆ ವಿಮೆ ಪರಿಹಾರ ಹಾಗೂ ಬರ ಪರಿಹಾರ ಬಿಡುಗಡೆ ಮಾಡಬೇಕು. ಕೆಲ ರೈತರಿಗೆ ಬೆಳೆ ವಿಮೆ ಪರಿಹಾರ ಈವರೆಗೆ ಕೈ ಸೇರಿಲ್ಲ. ಅಧಿಕಾರಿಗಳನ್ನು ಕೇಳಿದರೆ ವಿಮೆ ಕಂಪನಿಯತ್ತ ದೂರುತ್ತಾರೆ. ಇದರಿಂದ ರೈತರಿಗೆ ಸರಿಯಾದ ಮಾಹಿತಿ ಸಿಗದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಮಳೆ ಇಲ್ಲದೇ ಅಂತರ್ಜಲ ಕುಸಿದಿದೆ. ಖಾಸಗಿ ಕೊಳವೆಬಾವಿ ಏಜೆನ್ಸಿಗಳು ಕೊಳವೆ ಬಾವಿ ಕೊರೆಸುವ ಕಾರಣದಿಂದ ರೈತರಿಂದ ಮನಸೋ ಇಚ್ಛೆಯಂತೆ ಹಣ ಪೀಕುತ್ತಿದ್ದಾರೆ. ಹೀಗಾಗಿ ಸರ್ಕಾರ ಪ್ರತಿ ಅಡಿಗೆ ಇಷ್ಟು ದರ ಎಂದ ದರಪಟ್ಟಿ ಕಡ್ಡಾಯಗೊಳಿಸಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ರೈತ ಸಂಘದ ಗೌರಿಬಿದನೂರು ತಾಲ್ಲೂಕು ಅಧ್ಯಕ್ಷ ಲೋಕೇಶ್‌ಗೌಡ, ಚಿಂತಾಮಣಿ ಅಧ್ಯಕ್ಷ ಕದಿರೇಗೌಡ, ಕಾರ್ಯದರ್ಶಿ ಅಂಜಿನಪ್ಪ, ಶಿಡ್ಲಘಟ್ಟ ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನಚಾರಿ, ಮುಖಂಡರಾದ ರಾಮಚಂದ್ರಾರೆಡ್ಡಿ, ಎಚ್.ನಾಗರಾಜ್, ಕೃಷ್ಣಪ್ಪ, ಅಶ್ವತ್ಥಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.