Home News Covid-19 ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ

Covid-19 ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ

0
Chikkaballapur DC R Latha Covid-19 Third Wave Children Safety Measures Meeting

Chikkaballapur: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಕೊರೊನಾ ಸೋಂಕಿನ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮಕ್ಕಳ ತಜ್ಞರ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿದರು.

ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕಿನಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಸೋಂಕನ್ನು ನಿಯಂತ್ರಿಸುವುದಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು, ಸಂತಾನೋತ್ಪತ್ತಿ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಮಕ್ಕಳ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸುವುದಾಗಿ ಅವರು ತಿಳಿಸಿದರು .

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಆರಂಭವಾದಾಗಿನಿಂದ 150ಕ್ಕೂ ಹೆಚ್ಚು ಮಕ್ಕಳಿಗೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಲಾಗಿದೆ ಮತ್ತು ಒಂದು ಮಗುವೂ ಸಾವಿಗೀಡಾಗದಂತೆ ಎಚ್ಚರವಹಿಸಲಾಗಿದೆ ಎಂದು ಅವರು ತಿಳಿಸಿದರು.

ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುತ್ತದೆ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಏನು ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎನ್ನುವ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ ಎಂದು ಹೇಳಿದರು.

ಮಕ್ಕಳ ಆರೋಗ್ಯ ಉತ್ತಮಪಡಿಸಿ ತೀವ್ರ ಅಪೌಷ್ಟಿಕ ಮಕ್ಕಳಿಗೆ ವಿಶೇಷ ಆರೈಕೆ ನೀಡಿ ಅಪೌಷ್ಟಿಕತೆಯಿಂದ ಮುಕ್ತರಾಗಿಸುವ ನಿಟ್ಟಿನಲ್ಲಿ ಇಲಾಖೆಯು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ ಸಮರ್ಪಕ ಆಹಾರ ವಿತರಣೆ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ವಿಶೇಷ ಆರೈಕೆ, ಫಲಾನುಭವಿಗಳಿಗೆ ಆಹಾರ ಕಿಟ್ ವಿತರಣೆಯ ವಿಷಯವಾಗಿ ಅಂಗನವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ಕೊಟ್ಟು ಪರಿಶೀಲಿಸಲು, ಮಕ್ಕಳು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಕೆ.ಮಿಥುನ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮಕ್ಕಳ ತಜ್ಞರು ಮತ್ತು ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version