Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಗುರುವಾರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ (Disaster Management Authority Meeting) ನಡೆಸಲಾಯಿತು.
ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದು ಮಾತನಾಡಿದ ಜಿಲ್ಲಾಧಿಕಾರಿಗಳು “ಪ್ರಸ್ತುತ ಗ್ರಾಮಾಂತರ ಪ್ರದೇಶದ 39 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದು ಆ ಗ್ರಾಮಗಳಲ್ಲಿ ಖಾಸಗಿ ಕೊಳೆವೆ ಬಾವಿಗಳ ಮೂಲಕ ನೀರು ಒಪ್ಪಂದದ ಮೇರೆಗೆ ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿನ ಜಾನುವಾರುಗಳಿಗೆ 20 ವಾರಗಳಿಗೆ ಆಗುವಷ್ಟು ಮೇವಿನ ದಾಸ್ತಾನು ಲಭ್ಯವಿದ್ದು ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಮೇವು ನಿಧಿಯನ್ನು ಸ್ಥಾಪಿಸಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿನ ಯಾವುದೇ ಕೆರೆಗಳಿಂದ ಯಾವುದೇ ವ್ಯಕ್ತಿ ಯಾವುದೇ ಉದ್ದೇಶಕ್ಕೆ ನೀರನ್ನು ಪಂಪ್ ಸೆಟ್ ಮೂಲಕ ಪೂರೈಕೆ ಮಾಡಿಕೊಳ್ಳುವಂತಿಲ್ಲ. ಅಂತಹ ಪ್ರಕರಣಗಳು ಕಂಡು ಬಂದರೆ ಕಾನೂನು ಕ್ರಮ ವಹಿಸಬೇಕು. ನೀರು ಪೂರೈಸಲು ಮುನ್ನೆಚ್ಚರಿಕೆಯಾಗಿ ಖಾಸಗಿ ಕೊಳೆವೆ ಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಸಿದ್ದರಿರಬೇಕು” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.