Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ (FSSAI Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಕಬಾಬ್ ಮತ್ತು ಗೋಬಿ ತಯಾರಿಕೆಯಲ್ಲಿ ಉಲ್ಲಂಘನೆ ಪ್ರಕರಣ ಕಂಡುಬಂದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಬಹುದಾಗಿದ್ದು ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾಂಸದ ಅಂಗಡಿ ಹಾಗೂ ಸಂಸ್ಕರಣಾ ಕೈಗಾರಿಕೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆಯನ್ವಯ ಪರವಾನಗಿ ಪಡೆದುಕೊಳ್ಳಬೇಕು. ಈ ಕುರಿತು ಮಾರಾಟಗಾರರಿಗೆ ಅರಿವು ಮೂಡಿಸಬೇಕು.ನ್ಯಾಯಬೆಲೆ ಅಂಗಡಿ ನಡೆಸುವವರು, ಹೋಟೆಲ್ ಮಾಲೀಕರು, ಆಹಾರ ಉದ್ದಿಮೆದಾರರು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಆಹಾರ ಸುರಕ್ಷತಾ ಮತ್ತು ಗುಣಮಟ್ಟ ವಿಭಾಗದ ಡಾ.ಬಿ.ಧರ್ಮೇಂದ್ರ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಈಶ್ವರಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್, ಆಹಾರ ಸುರಕ್ಷತಾ ಅಧಿಕಾರಿ ಜಿ.ಹರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮುನಿರತ್ನಮ್ಮ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಉಪಸ್ಥಿತರಿದ್ದರು.