Gauribidanur : ಗೌರಿಬಿದನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (Government First Grade College) ಕಟ್ಟಡ, ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿ ಆವರಣದಲ್ಲಿ ನಿರ್ಮಿಸಿರುವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (Boys & Girls Hostels) ಉದ್ಘಾಟನೆ ಕಾರ್ಯಕ್ರಮ ಸೋಮವಾರ ನಡೆಯಿತು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ “ರಾಜ್ಯದ ಸರ್ಕಾರಿ ಪದವಿ ಕಾಲೇಜು, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಂದ ಸಂಗ್ರಹವಾಗುವ ಶುಲ್ಕವನ್ನು ಆಯಾ ಕಾಲೇಜುಗಳ ಅಭಿವೃದ್ಧಿ ಸಮಿತಿಗಳಿಗೆ ನೀಡಿ ಆಯಾ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗದ ಖಾತ್ರಿ ದೊರೆಯಬೇಕೆಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಅಳವಡಿಸಿಕೊಳ್ಳಲಾಗಿದ್ದು, ಇಡೀ ಶೈಕ್ಷಣಿಕ ವಲಯವು ಡೀಪ್ ಲರ್ನಿಂಗ್ ಕ್ರಮದತ್ತ ಹೊರಳಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೂಡ ಆಧುನಿಕ ತಂತ್ರಜ್ಞಾನ ಕೋರ್ಸುಗಳನ್ನು ಪಠ್ಯದಲ್ಲಿ ಕಡ್ಡಾಯಗೊಳಿಸಲಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ತಹಸೀಲ್ದಾರ್ ಎಚ್.ಶ್ರೀನಿವಾಸ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಎನ್.ಪ್ರಕಾಶರೆಡ್ಡಿ, ನಗರಸಭೆ ಅಧ್ಯಕ್ಷೆ ಎಸ್.ರೂಪ, ಪ್ರಾಂಶುಪಾಲರಾದ ಶಿವಣ್ಣ, ತಾ.ಪಂ ಇಒ ಆರ್.ಹರೀಶ್, ಮುಖಂಡರಾದ ಮೋಹನ್, ಕೆ.ಎನ್.ಕೇಶವರೆಡ್ಡಿ, ರಮೇಶ್ ರಾವ್, ಬೊಮ್ಮಣ್ಣ ಉಪಸ್ಥಿತರಿದ್ದರು.