Gauribidanur : ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಗ್ರಾಮಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ (KJ George) ಸೋಮವಾರ ಭೇಟಿ ನೀಡಿ ಕುಸುಮ್ ಸಿ ಯೋಜನೆ (kusum c solar scheme) ಕಾರ್ಯಕ್ರಮ ಹಮ್ಮಿಕೊಳ್ಳಲಾಗುವ ಸ್ಥಳ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿ ಉತ್ತೇಜಿಸುವ ಗುರಿ ಹೊಂದಿರುವ ‘ಕುಸುಮ್ ಸಿ’ ಯೋಜನೆಗೆ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರವು ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಪ್ರಸ್ತುತ 5 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದ್ದು ರೈತರಿಗೆ ಉಚಿತವಾಗಿ ನೀಡಲಾಗುತ್ತಿರುವ ವಿದ್ಯುತ್‌ಗಾಗಿ ರಾಜ್ಯ ಸರ್ಕಾರವು ವಿದ್ಯುತ್ ಕಂಪನಿಗಳಿಗೆ ₹18 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಸಬ್ಸಿಡಿಯಾಗಿ ಪಾವತಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ರೈತರ ಪಂಪ್‌ಸೆಟ್‌ಗಳಿಗೆ ಸಮಸ್ಯೆ ಇಲ್ಲದೆ ವಿದ್ಯುತ್ ನೀಡಲು ಕುಸುಮ್ ಬಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳಲಿದ್ದಾರೆ. ಕುಸುಮ್ ಸಿ ಮೂಲಕ 2,400 ಮೆಗಾ ವಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಸ್ಥಳೀಯ ಸುತ್ತಮುತ್ತಲಿನ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸಲು ಅನುಕೂಲವಾಗಲಿದೆ. ಈ ಹಿಂದೆ ಅಕ್ರಮ ಸಕ್ರಮದಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಈವರೆಗೆ 2.5 ಲಕ್ಷ ಅರ್ಜಿಗಳು ವಿಲೇವಾರಿಯಾಗಿದ್ದು, ಉಳಿದ ಅರ್ಜಿಗಳನ್ನು ಹಂತಹಂತವಾಗಿ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ. ಸುಧಾಕರ್, ಗೌರಿಬಿದನೂರು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ , ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.