Gauribidanur : ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿಯ ಗಡಿಗ್ರಾಮಗಳಿಗೆ ನಿತ್ಯ ಸಂಚರಿಸುವ ಸರ್ಕಾರಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸುತ್ತಿಲ್ಲ. ಸಮರ್ಪಕ ಸಾರಿಗೆ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಜಿ.ಪಂ ಮಾಜಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ ತಿಳಿಸಿದರು.
KSRTC ಸಾರಿಗೆ ಘಟಕಕ್ಕೆ ಸೋಮವಾರ ವಿದ್ಯಾರ್ಥಿಗಳೊಂದಿಗೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಸುಮಾರು 40 ಕಿ.ಮೀ ದೂರದ ಹಳ್ಳಿಗಳಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಸಾರಿಗೆ ವ್ಯವಸ್ಥೆ ಸಿಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಮರ್ಪಕ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೂರಾರು ವಿದ್ಯಾರ್ಥಿಗಳು ಘಟಕಕ್ಕೆ ಮುತ್ತಿಗೆ ಹಾಕಿ ಯಾವುದೇ ಬಸ್ ರಸ್ತೆಯಲ್ಲಿ ಸಂಚರಿಸಲು ಬಿಡುವುದಿಲ್ಲ ಎಂದರು.
ಸಾರಿಗೆ ಘಟಕ ವ್ಯವಸ್ಥಾಪಕ ಶಿವಪ್ಪ ಪ್ರತಿಕ್ರಿಯಿಸಿ, ಕೆಲವು ತಾಂತ್ರಿಕ ಕಾರಣಗಳಿಂದ ಬಸ್ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಇಂದು ಸಂಜೆಯಿಂದಲೇ ಎಂದಿನಂತೆ ಆಯಾ ಮಾರ್ಗವಾಗಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸುವಂತೆ ನೋಡಿಕೊಳ್ಳಲಾಗುವುದು ಎಂದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur