Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ‘ಗೃಹಲಕ್ಷ್ಮಿ’ (Gruha Lakshmi Scheme) ಯೋಜನೆಯ ಅನುಷ್ಠಾನ (Inauguration) ಕುರಿತು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಅಧಿಕಾರಿಗಳ ಸಭೆ ನಡೆಸಿದರು.
ಆ.30ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಜಾರಿಗೆ ಚಾಲನೆ ನೀಡುವರು. ಅಂದೇ ರಾಜ್ಯ ಮಟ್ಟದ ಕಾರ್ಯಕ್ರಮದ ನೇರ ಪ್ರಸಾರದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ 2,99,509 ಮಹಿಳೆಯರು ಅರ್ಹರಾಗಿದ್ದು ಇಲ್ಲಿಯವರೆಗೆ ಶೇ 83.66ರಷ್ಟು ಮಹಿಳೆಯರು ನೋಂದಣಿ ಆಗಿದ್ದಾರೆ. ನೋಂದಣಿ ಪ್ರಕ್ರಿಯೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯಮಟ್ಟದಲ್ಲಿ 18ನೇ ಸ್ಥಾನದಲ್ಲಿ ಇದೆ. ಆ.24ರ ವರೆಗೆ 2,50,582 ಮಹಿಳೆಯರು ನೋಂದಣಿಯಾಗಿದ್ದು 48,927 ಮಹಿಳೆಯರ ನೋಂದಣಿ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅಶ್ವತಮ್ಮ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.