Gudibande : ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು (World Population Day) ಆಚರಿಸಲಾಯಿತು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಬಾಲ್ಯ ವಿವಾಹದಂತಹ ಕೆಲವು ನಂಬಿಕೆ ಹಾಗೂ ಆಚರಣೆಗಳಿಂದ ಜನಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಬಡತನವನ್ನು ಕಡಿಮೆ ಮಾಡಲು ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಜನಸಂಖ್ಯೆಯನ್ನು ನಿಯಂತ್ರಿಸುವುದು ಮುಖ್ಯವಾಗಿದೆ. ನಾವು ಜನಸಂಖ್ಯೆಯನ್ನು ನಿಯಂತ್ರಿಸದಿದ್ದರೆ, ಅದು ಭೂಮಿಯ ಮೇಲೆ ಅಸಮತೋಲನವನ್ನು ಉಂಟುಮಾಡುತ್ತದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಬಡತನ, ಮಾಹಿತಿ ಕೊರತೆ, ಮೂಢನಂಬಿಕೆಗಳು, ಬಾಲ್ಯ ವಿವಾಹಗಳು ಕಾರಣವಾಗಿವೆ ಎಂದು ಚಂದ್ರಶೇಖರ್ ವಿವರಿಸಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಿತ್ತಿಪತ್ರಗಳನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಮತ್ತಿತರರು ಉಪಸ್ಥಿತರಿದ್ದರು.