Chowdasandra, Sidlaghatta : ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಭಾನುವಾರ ವಿಶೇಷ ಪೂಜೆ ನಡೆಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಮಯೂರ ವೃತ್ತದ ಆಂಜನೇಯಸ್ವಾಮಿ, ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇಗುಲ, ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯ, ಮುತ್ತೂರು ಗ್ರಾಮ, ನಾಗಮಂಗಲ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯ, ಎಚ್.ಕ್ರಾಸ್, ಚೊಕ್ಕಂಡಹಳ್ಳಿ, ಎದ್ದಲತಿಪ್ಪೇನಹಳ್ಳಿ, ಜಂಗಮಕೋಟೆ ಕ್ರಾಸ್ ಮುಂತಾದೆಡೆ ಶ್ರದ್ದಾ ಭಕ್ತಿಯಿಂದ ಹನುಮ ಜಯಂತಿ ಆಚರಿಸಲಾಯಿತು.
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ 33 ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಹೋಮ ,ಹವನ, ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ, ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು.
ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ರಾತ್ರಿ ಗ್ರಾಮದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ತೀರ್ಥ, ಪ್ರಸಾದ ಸೇವೆಗಳು ನಡೆದವು. ಸಾವಿರಾರು ಜನ ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ನಾಗರಿಕ ಆಹಾರ ಸರಬರಾಜು ಸಚಿವರಾದ ಕೆ.ಎಚ್.ಮುನಿಯಪ್ಪ, ಶಾಸಕ ಬಿ.ಎನ್.ರವಿಕುಮಾರ್, ದೇವಸ್ಥಾನ ಸಮಿತಿಯ ಅಧ್ಯಕ್ಷ ವೆಂಕಟಸ್ವಾಮಿ, ಕಾರ್ಯದರ್ಶಿ ದೇವರಾಜ್, ಖಚಾಂಚಿ ಎಚ್.ಎನ್. ಆಂಜಿನಪ್ಪ, ಹುಜುಗೂರು ರಾಮಣ್ಣ, ತಾದೂರು ರಘು, ಕೋಲಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್ ಗೌಡ , ಕೆ.ಮಂಜುನಾಥ್ ಸ್ವಾಮಿಯ ದರ್ಶನ ಪಡೆದರು.