Chikkaballapur : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ (International Day of Democracy) ಪ್ರಯುಕ್ತ ರಾಜ್ಯ ಸರ್ಕಾರ ಕೈಗೊಂಡಿದ್ದ ಮಾನವ ಸರಪಳಿಯಲ್ಲಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು, ಸರ್ಕಾರಿ ನೌಕರರು, ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಸ್ವಯಂ ಸೇವಾ ಮತ್ತು ಸಂಘ ಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸಂಪರ್ಕಿಸುವ ಮೊಡಕು ಹೊಸಹಳ್ಳಿಯಿಂದ ಕೋಲಾರ ಜಿಲ್ಲೆಯ ಗಡಿಯಲ್ಲಿರುವ ಎಚ್.ಕ್ರಾಸ್ ವರೆಗೂ 48ಕಿಮೀ ಉದ್ದ ನಿರ್ಮಾಣವಾಗಿದ್ದ ಮಾನವ ಸರಪಳಿಯಲ್ಲಿ 35 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಭಾನುವಾರ ಬೃಹತ್ ಮಾನವ ಸರಪಳಿ ರಚಿಸಲಾಗಿತ್ತು. ಅರಣ್ಯ ಇಲಾಖೆಯು ಮಾನವ ಸರಪಳಿ ನಿರ್ಮಾಣದ ದಾರಿಯುದ್ದಕ್ಕೂ 100 ಮೀಟರ್‌ಗೆ ಒಂದರಂತೆ ಸಸಿ ನೆಟ್ಟಿತು. ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಶಿಡ್ಲಘಟ್ಟ :
ಶಿಡ್ಲಘಟ್ಟ ತಾಲ್ಲೂಕಿನ ಗಡಿಭಾಗ ಲಕ್ಕಹಳ್ಳಿ ಗೇಟ್‌ನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಿರ್ಮಿಸಿದ್ದ ಮಾನವ ಸರಪಳಿಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರು, ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿ ಸಂವಿಧಾನ ಪ್ರತಿಜ್ಞೆ ಸ್ವೀಕರಿಸಿದರು.
ಚಿಂತಾಮಣಿ:
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಚಿಂತಾಮಣಿ ತಾಲ್ಲೂಕು ಮತ್ತು ಜಿಲ್ಲಾಡಳಿತ ಭಾನುವಾರ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಶಾಲಾ ಮಕ್ಕಳು ಭಾಗವಹಿಸಿದ್ದರು.