Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಶ್ವ ಅಂಗವಿಕಲರ ದಿನಾಚರಣೆ (International Day of Disabled Persons) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. SSLC ಮತ್ತು ದ್ವಿತೀಯ PUC ಯಲ್ಲಿ ಹೆಚ್ಚು ಅಂಕಗಳಿಸಿದ ಅಂಗವಿಕಲ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ಕಾರ್ಯಕ್ರಮದಲ್ಲಿ ಮಾತನಾಡಿ “ಅಂಗವಿಕಲ ಹೆಣ್ಣು ಮಕ್ಕಳು ಹೆಚ್ಚಾಗಿ ಲೈಂಗಿಕ ಕಿರುಕುಳಕ್ಕೆ ಮತ್ತು ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂತಹವರಿಗೆ ನ್ಯಾಯ ಒದಗಿಸಿಕೊಡಬೇಕು. ಕಾನೂನು ಸೇವೆಗಳ ಅಡಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ವಿಶೇಷ ನ್ಯಾಯಾಲಯವನ್ನು ಗುರುತಿಸಿದ್ದಾರೆ. ಇದರಿಂದ ಅಂಗವಿಕಲರಿಗೆ ತೀರ್ಪು ಬೇಗ ಸಿಗಲಿದ್ದು ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು”ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ಎನ್. ಗಂಗಾಧರಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೌತಾಜ್, ಆಶಾಕಿರಣ ಅಂಧ ಮಕ್ಕಳ ಶಾಲೆಯ ಗೋಪಾಲ್, ಪ್ರಜ್ಞಾ ಟ್ರಸ್ಟ್ ಅಧ್ಯಕ್ಷ ನಾಗರಾಜ್, ವಿವಿಧೋದ್ದೇಶ ಪುನರ್ವಸತಿ ಸಂಯೋಜಕ ಕೃಷ್ಣಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.