Chikkaballapur : ಚಿಕ್ಕಬಳ್ಳಾಪುರ ನಗರದ ಪೊಲೀಸ್ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (Dr MC Sudhakar) ನೇತೃತ್ವದಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆಯಿತು. 6 ಕೌಂಟರ್‌ಗಳನ್ನು ತೆರೆಯಲಾಗಿದ್ದ ಜನತಾ ದರ್ಶನದಲ್ಲಿ ವಿವಿಧ ಇಲಾಖೆಗಳಿಂದ ಒಟ್ಟು 237 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 65ಕ್ಕೂ ಹೆಚ್ಚು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳೇ ಬಂದವು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ.ಎಂ.ಸಿ.ಸುಧಾಕರ್ “ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಮೊದಲ ಬಾರಿಗೆ ಸರ್ಕಾರ ಆಯೋಜಿಸಿದ್ದು ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಅಲ್ಲಿಯೇ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಸ್ಥಳದಲ್ಲೇ ಪರಿಹಾರ ಮಾಡಲು ಸಾಧ್ಯವಾಗದಿದ್ದಲ್ಲಿ ಸಂಬಂಧ ಪಟ್ಟ ಇಲಾಖೆಗೆ ವರ್ಗಾಯಿಸಿ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುತ್ತದೆ. ಈ ವ್ಯವಸ್ಥೆ ಯೋಜಿತ ರೀತಿಯಲ್ಲಿ ಡಿಜಿಟಲ್ ನಿಗಾ ಮೂಲಕ ನಿರ್ವಹಿಸಲಾಗುತ್ತಿದೆ. ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುತ್ತದೆ. ಆದ್ದರಿಂದ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಅಶ್ವಿನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್. ಭಾಸ್ಕರ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.