Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬುಧವಾರ 68ನೇ ಕನ್ನಡ ರಾಜ್ಯೋತ್ಸವವನ್ನು (68 Karnataka Rajyotsava) ಸಾರ್ವಜನಿಕರು, ಶಾಲೆಗಳು ಮತ್ತು ಅನೇಕ ಸಂಘಸಂಸ್ಥೆಗಳು ಸೇರಿ ಅದ್ಧೂರಿಯಾಗಿ ಆಚರಿಸಿದರು.
ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿ ಮುಂದಿನ ಕನ್ನಡ ರಾಜ್ಯೋತ್ಸವದ ವೇಳೆಗೆ ಚಿಕ್ಕಬಳ್ಳಾಪುರ ನಗರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕನ್ನಡ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಪ್ರದೀಪ್ ಈಶ್ವರ್, ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಿಡ್ಲಘಟ್ಟ

ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕಿನ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ನೆರವೇರಿಸಲಾಯಿತು.
ಚಿಂತಾಮಣಿ

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ನಗರದ ಝಾನ್ಸಿರಾಣಿ ಲಕ್ಷ್ಮಿಬಾಯಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ತಹಶೀಲ್ದಾರ್ ಸುದರ್ಶನ ಯಾದವ್ ನೆರವೇರಿಸಿದರು.
ಗೌರಿಬಿದನೂರು

ಗೌರಿಬಿದನೂರು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವವನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಉದ್ಘಾಟಿಸಿದರು.
ಬಾಗೇಪಲ್ಲಿ

ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.