Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ (Maharshi Valmiki Jayanti) ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕೆ.ವಿ ನಂದಿತಾ, ಪೃದ್ವಿರಾಜ್, ಮಧುಶ್ರೀ ವಿದ್ಯಾರ್ಥಿಗಳಿಗೆ ₹ 1 ಲಕ್ಷ ಮೌಲ್ಯದ ಚೆಕ್ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರಿಗೆ ₹ 2.5 ಲಕ್ಷದ ಮೌಲ್ಯದ ಚೆಕ್ ಅನ್ನು ಜಿಲ್ಲಾಧಿಕಾರಿ ವಿತರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ “ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಈ ಮಹಾಕಾವ್ಯದಲ್ಲಿ ಮನುಷ್ಯ ವ್ಯಕ್ತಿತ್ವ , ಜ್ಞಾನ, ದಾರ್ಶನಿಕರಾಗಿಯೂ, ಸಮಾಜ ಸುಧಾರಕರಾಗಿ ಕಾಣಬಹುದು ಮತ್ತು ಕುಟುಂಬದಲ್ಲಿ ಹೇಗೆ ಇರಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದು ರಾಮಾಯಣ ಮಹಾಕಾವ್ಯದ ಮಹತ್ವವನ್ನು ಓದುವ ಮೂಲಕ ಎಲ್ಲರು ಅರಿತುಕೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ಡಿವೈಎಸ್ಪಿ ವಿ.ಕೆ.ವಾಸುದೇವ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವಿ.ಎಸ್ ಹೇಮಲತಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ರೆಡ್ಡಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ “ಕಳೆದ 40 ವರ್ಷಗಳ ನಿರಂತರ ಮೀಸಲು ಹೋರಾಟಕ್ಕೆ ಮುಕ್ತಿ ಕೊಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದ್ದು ಇತಿಹಾಸದಲ್ಲಿ ನುಡಿದಂತೆ ನಡೆದ ಏಕೈಕ ಸರ್ಕಾರ ಎಂದರೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕು ಎಂಬುದು ನಮ್ಮ ಸರ್ಕಾರದ ಉದ್ಧೇಶವಾಗಿದ್ದು ನಾಗಮೋಹನ್ ದಾಸ್ ಅವರ ವರದಿಯನ್ನು ಸಂಪೂರ್ಣವಾಗಿ ಸಂಪುಟದಲ್ಲಿ ಒಪ್ಪಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸಲು ಒಪ್ಪಿಗೆ ಸೂಚಿಸಲಾಗಿದೆ. ಮುದ್ದೇನಹಳ್ಳಿ ಗ್ರಾ.ಪಂ ಅನ್ನು ಶಿಕ್ಷಣ ವಲಯವಾಗಿ ರೂಪಿಸಲು ಶ್ರಮಿಸಲಾಗುತ್ತಿದ್ದು ಸತ್ಯಸಾಯಿ ಸಂಸ್ಥೆಯಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಈಗಾಗಲೇ ಪರವಾನಿಗೆ ನೀಡಲಾಗಿದೆ” ಎಂದು ಹೇಳಿದರು.
ಕಾಯಕ್ರಮದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷ ಮುನಿನಾರಾಯಣಪ್ಪ, ಶಿವಕುಮಾರ್, ಛಾಯಾ, ರಂಗಣ್ಣ, ಆವುಲಕೊಂಡರಾಯಪ್ಪ, ಕೃಷ್ಣಮೂರ್ತಿ, ಲಕ್ಷ್ಮಣ್, ನರಸಿಂಹಮೂರ್ತಿ, ನಾರಾಯಣಸ್ವಾಮಿ, ಗೋಪಾಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಗುಡಿಬಂಡೆ
ಗುಡಿಬಂಡೆ (Gudibande) ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಸಿಗ್ಬತುಲ್ಲಾ ಉದ್ಘಾಟಿಸಿದರು.
ಶಿಡ್ಲಘಟ್ಟ
ಶಿಡ್ಲಘಟ್ಟ (Sidlaghatta) ನಗರದ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ವಿ.ಮುನಿಯಪ್ಪ ಮತ್ತು ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್ ಉದ್ಘಾಟಿಸಿದರು.
ಸಾದಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಉದ್ಘಾಟಿಸಿದರು .
ಬಾಗೇಪಲ್ಲಿ
ಬಾಗೇಪಲ್ಲಿ (Bagepalli) ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟಿಸಿದರು.
ಚಿಂತಾಮಣಿ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ ಉದ್ಘಾಟಿಸಿದರು.
ಗೌರಿಬಿದನೂರು
ಗೌರಿಬಿದನೂರು (Gauribidanur) ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.