Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಬೆಸ್ಕಾಂ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ (DR M C Sudhakar) ಕುಂದುಕೊರತೆಗಳ ಸಭೆ (BESCOM Officials Grievances meeting) ನಡೆಸಿದರು.
ಕುಡಿಯುವ ನೀರಿನ ಪೂರೈಕೆಗಾಗಿ ಕೊರೆಯುವ ಹೊಸ ಕೊಳವೆ ಬಾವಿಗಳಿಗೆ ಅತಿ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಭೆಯಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಈ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದೆ. ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಕೊರೆಯುವ ಅನಿವಾರ್ಯತೆ ಕೆಲವು ಕಡೆ ಎದುರಾಗಿದೆ.ವಿದ್ಯುತ್ ಸಂಪರ್ಕ ಕೋರಿ ಜಿಲ್ಲೆಯಲ್ಲಿ 1,842 ಅರ್ಜಿಗಳು ಪ್ರಸ್ತುತ ಬಂದಿದ್ದು ಆ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಿ ರೈತರಿಗೆ ಅನುಕೂಲ ಮಾಡಬೇಕು. ಜಿಲ್ಲೆಯಲ್ಲಿ ಅಕ್ರಮ ಸಕ್ರಮದಡಿ ಬಂದಿರುವ 1,842 ಅರ್ಜಿಗಳ ಪೈಕಿ 457 ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಉಳಿದ ಅರ್ಜಿಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ರೈತರ ಕೃಷಿ ಪಂಪ್‌ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ಪ್ರತಿ ವರ್ಷ ₹ 4,000 ಕೋಟಿ ಖರ್ಚು ಮಾಡುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಸಂಸದ ಬಿ.ಎನ್.ಬಚ್ಚೇಗೌಡ, ಶಾಸಕ ರಾದ ಎಸ್.ಎನ್.ಸುಬ್ಬಾರೆಡ್ಡಿ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.