Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಆಸ್ಪತ್ರೆಯ (District Hospital) ವ್ಯವಸ್ಥೆಗಳ ಬಗ್ಗೆ ಹೆಚ್ಚು ದೂರುಗಳು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (Dr M C Sudhakar) ದಿಢೀರ್ ಭೇಟಿ ನೀಡಿ (Visit) ರೋಗಿಗಳು ಮತ್ತು ಅವರ ಸಂಬಂಧಿಕರ ಜತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು “‘ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅಂದು ಹೆಚ್ಚು ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈಗ ಯಾರಿಗೂ ತಿಳಿಸದಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ವೈದ್ಯರು ಸರಿಯಾಗಿ ಇಲ್ಲ. ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ವೈದ್ಯಕೀಯ ಕಾಲೇಜಿನ ನಿರ್ದೇಶಕರ ನಡುವೆ ಹೊಂದಾಣಿಕೆ ಇಲ್ಲ ಎನ್ನುವ ದೂರುಗಳು ಬಂದಿದ್ದು ಇಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಈಗ ವೈದ್ಯಕೀಯ ಶಿಕ್ಷಣ ಇಲಾಖೆಯ ಸುಪರ್ದಿಗೆ ವಹಿಸಲಾಗಿದ್ದು ವೈದ್ಯಕೀಯ ಕಾಲೇಜಿಗೆ ಕನಿಷ್ಠ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇರಬೇಕು. ಆಸ್ಪತ್ರೆಯಲ್ಲಿ ಮತ್ತೆ ಎರಡು ಅಂತಸ್ತುಗಳನ್ನು ನಿರ್ಮಿಸಲಾಗುವುದು. ಶೀಘ್ರದಲ್ಲೇ ರಾಜೀವ್ ಗಾಂಧಿ ಆರೋಗ್ಯ ವಿವಿ ಮೂಲಕ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕೊಡಿಸುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್, ರಕ್ತ ಪರೀಕ್ಷೆಯ ಲ್ಯಾಬ್‌ಗಳಿಗೆ ಸ್ಥಳ ನೀಡಲಾಗುತ್ತದೆ. ಒಟ್ಟಾರೆ ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಆಗಬೇಕು” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ನಂದಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.