Home Chikkaballapur ಶಂಕರ್‌ನಾಗ್ ಕನಸಿನ ನಂದಿ ರೋಪ್ ವೇ ಶೀಘ್ರದಲ್ಲೇ ಈಡೇರಲಿದೆ : ಸಚಿವ ಸುಧಾಕರ್

ಶಂಕರ್‌ನಾಗ್ ಕನಸಿನ ನಂದಿ ರೋಪ್ ವೇ ಶೀಘ್ರದಲ್ಲೇ ಈಡೇರಲಿದೆ : ಸಚಿವ ಸುಧಾಕರ್

0
Nandi Hills Rope Way Place Inspection Dr M C Sudhakar

Chikkaballapur : ನಂದಿಗಿರಿಧಾಮದಲ್ಲಿ (Nandi Hills) ರೋಪ್ ವೇ (Rope Way) ಅಳವಡಿಸಲು ಸರ್ಕಾರ ತೀರ್ಮಾನಿಸಿ ಈಗಾಗಲೇ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದ್ದು ಕೆಲವು ತಾಂತ್ರಿಕ ಕಾರಣಗಳಿಂದ ಕೆಲಸ ಆರಂಭವಾಗದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (Dr M C Sudhakar) ಶುಕ್ರವಾರ ಸ್ಥಳ ಪರಿಶೀಲನೆ (Place Inspection) ನಡೆಸಿದರು.

ಈ ಸಂದರ್ಭದಲ್ಲಿ ಮಾತಾನಾಡಿದ ಸಚಿವ ಡಾ.ಎಂ.ಸಿ.ಸುಧಾಕರ್ “ನಂದಿಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಯಿಂದಲೇ ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಗಮನಸೆಳೆಯಲು ತೀರ್ಮಾನಿಸಲಾಗಿದೆ. ರೋಪ್ ವೇ ಕಾಮಗಾರಿ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಡೈನಾಮಿಕ್ಸ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ ಜತೆಗೆ ಒಪ್ಪಂದಕ್ಕೆ ಸಹಿ ಹಾಕಿದ್ದು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‌ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ ₹93.40 ಕೋಟಿ ವೆಚ್ಚ ಅಂದಾಜಿಸಲಾಗಿತ್ತು, ಪ್ರಸ್ತುತ ಈ ವೆಚ್ಚ ₹115 ಕೋಟಿ ಆಗಲಿದೆ. ಮೊದಲು ಅಂದಾಜಿಸಲಾಗಿದ್ದ ಕಾಮಗಾರಿ ಜತೆಗೆ ಕೆಲವು ಕಾಮಗಾರಿಗಳು ಸೇರ್ಪಡೆ ಆಗಿವೆ. ದಿವಂಗತ ನಟ ಶಂಕರ್‌ನಾಗ್ ರ ಆಶಯ ಮುಂದಿನ 18 ತಿಂಗಳಲ್ಲಿ ಈಡೇರಲಿದೆ” ಎಂದರು.

ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಮತ್ತು ತೋಟಗಾರಿಕೆ ಇಲಾಖೆ ಮಾಲೀಕತ್ವದಲ್ಲಿ ನಂದಿ ಗಿರಿಧಾಮದಲ್ಲಿರುವ ಎಲ್ಲಾ ಆಸ್ತಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿವೆ. ರೋಪ್ ವೇ ನಿರ್ಮಾಣಕ್ಕೆ ಜಿಲ್ಲೆ ವ್ಯಾಪ್ತಿಯ 9 ಎಕರೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೆ ಸೇರಿದ 7 ಎಕರೆ ಜಮೀನನ್ನು ಹಸ್ತಾಂತರ ಮಾಡುವ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ರೈತರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದರು.

ರೋಪ್‌ವೇ ನಿರ್ಮಾಣ ಸುಗಮ ಸಂಪರ್ಕದ ಜತೆಗೆ ನಂದಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದ್ದು ರೋಪ್ ವೇಗೆ ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣ ತಲುಪಲು ಅಂದಾಜು 13-15 ನಿಮಿಷ ಆಗಲಿದೆ. ಪ್ರತಿ ಗಂಟೆಗೆ ಸುಮಾರು 1,000 ಜನರನ್ನು ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣಕ್ಕೆ ಕರೆದೊಯ್ಯಬಹುದು. ಈ ಯೋಜನೆಯಿಂದಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ದೇವನಹಳ್ಳಿ ಕೋಟೆ, ನಂದಿ, ಭೋಗನಂದೀಶ್ವರ, ಘಾಟಿ ಸುಬ್ರಹ್ಮಣ್ಯ, ವಿದುರಾಶ್ವತ್ಥ, ಮುದ್ದೇನಹಳ್ಳಿ ಮುಂತಾದ ಪ್ರವಾಸಿ ತಾಣಗಳು ಅಭಿವೃದ್ಧಿಯಾಗಲಿವೆ ಎಂದು ಸಚಿವರು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಮ್ ಪ್ರಶಾಂತ್ ಮನೋಹರ್, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಡೈನಾಮಿಕ್ಸ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಅಶೋಕ್, ತಹಶೀಲ್ದಾರ್ ಅನಿಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಯಶ್ವಂತ್, ಇಒ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version