Sidlaghatta : ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಿದ ವೀರರಾಣಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒರ್ವ ಕೋಟೆ ಕಾವಲುಗಾರನ ಹೆಂಡತಿಯಾಗಿ, ಕೋಟೆಗೆ ಆಪತ್ತು ಎದುರಾದಾಗ, ಸಮಯಪ್ರಜ್ಞೆಯಿಂದ ವೈರಿಗಳ ರುಂಡ ಚಂಡಾಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು. ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ಕಾಣಬೇಕು. ನಮ್ಮ ಕ್ಷೇತ್ರದ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದರೆ ನಮ್ಮಊರಿನ ಕೀರ್ತಿ ಹೆಚ್ಚುತ್ತದೆ ಎಂದರು.
ನಿವೃತ್ತ ಐ.ಎ.ಎಸ್ ಅಧಿಕಾರಿ ಮಳ್ಳೂರು ರಾಜು ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದನ್ನು ಎಲ್ಲರೂ ನೆನಪಿಟ್ಟುಕೊಳ್ಳಬೇಕು. ನಿಮ್ಮ ಆರೋಗ್ಯ ನಿಮ್ಮ ಕೈಲಿದೆ ಮತ್ತು ಮನೆಯಲ್ಲಿಯೇ ಇರುವ ಮನೆಮದ್ದುಗಳ ಬಗ್ಗೆ ತಿಳಿದು, ಹಿತಮಿತವಾಗಿ ಆಹಾರ ಸೇವಿಸುತ್ತಾ ಉತ್ತಮ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕೆಲವಾರು ಆರೋಗ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ವಿವರಿಸಿದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ನಮ್ಮ ತಾಲ್ಲೂಕಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಬೇಕು. ಆ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬ ಸದುದ್ದೇಶದಿಂದ ಪ್ರತಿಭಾ ಪುರಸ್ಕಾರ ಮಾಡುವಾಗ ವಿದ್ಯಾರ್ಥಿಗಳಿಗೆ ಉಪಯುಕ್ತ ಪುಸ್ತಕಗಳನ್ನು ನೀಡಲಾಗುತ್ತಿದೆ. ಚೆನ್ನಾಗಿ ಓದಿ ಊರಿಗೆ ಒಳ್ಳೆಯ ಹೆಸರನ್ನು ತನ್ನಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹದಿನೈದು ಮಂದಿ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶಾಸಕರಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ನಗರಸಭೆ ಆಯುಕ್ತ ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಿಡಿಪಿಒ ನವತಾಜ್, ಛಲವಾದಿ ಸಂಘದ ಜಿಲ್ಲಾಧ್ಯಕ್ಷ ತ್ಯಾಗರಾಜ್, ಮುಖಂಡರಾದ ಬಂಕ್ ಮುನಿಯಪ್ಪ, ಮೇಲೂರು ಮಂಜುನಾಥ್, ಜಗದೀಶ್, ತಾದೂರು ರಘು, ಬೆಳ್ಳೂಟಿ ಶ್ರೀರಾಮ್ ಹಾಜರಿದ್ದರು.