Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ, ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (pm poshan shakti nirman) (PM-POSHAN) ಅಕ್ಷರ ದಾಸೋಹ ಯೋಜನೆಯಡಿ ಪೌಷ್ಟಿಕ ಆಹಾರ ವಿತರಿಸುವ ಜಿಲ್ಲಾ ಹಂತದ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ “ರಾಜ್ಯ ಸರ್ಕಾರವು ಅಜೀಂ ಪ್ರೇಮ್ ಜೀ ಫೌಂಡೇಶನ್‌ನೊಂದಿಗೆ 1 ರಿಂದ 10ನೇ ತರಗತಿಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳಲ್ಲೂ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸಲು ಮುಂದಿನ ಮೂರು ವರ್ಷಗಳಿಗೆ ಒಪ್ಪಂದ ಮಾಡಿಕೊಂಡಿದ್ದು ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 1,601 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪೈಕಿ 1 ರಿಂದ 10ನೇ ತರಗತಿವರೆಗೆ 77,691 ವಿದ್ಯಾರ್ಥಿಗಳು ಈ ಯೋಜನೆ ಸೌಲಭ್ಯ ಪಡೆಯಲಿದ್ದು ಈ ಪೈಕಿ 66,194 ಮಕ್ಕಳು ಬೇಯಿಸಿದ ಮೊಟ್ಟೆ, 7,326 ಮಕ್ಕಳು ಬಾಳೆಹಣ್ಣು ಮತ್ತು 4,171 ವಿದ್ಯಾರ್ಥಿಗಳು ಶೇಂಗಾ ಚಿಕ್ಕಿಯನ್ನು ಕಳೆದ ಮೂರು ದಿನಗಳಿಂದ ಸ್ವೀಕರಿಸಿದ್ದಾರೆ. ವಿದ್ಯಾರ್ಥಿಗಳು ಆಂಗ್ಲಭಾಷೆಯಲ್ಲಿ ಮಾತನಾಡುವ ಹವ್ಯಾಸವನ್ನು ಶಾಲಾ ವಾತಾವರಣದಲ್ಲಿ ಬೆಳೆಸಿಕೊಳ್ಳಬೇಕು ಮತ್ತು ವಿದ್ಯಾರ್ಜನೆಯ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತಿಭಾವಂತರಾಗಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಬೈಲಾಂಜಿನಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್ ಕೇಶವ ರೆಡ್ಡಿ, ತಹಶೀಲ್ದಾರ್ ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ದೊಡ್ಡ ಪೈಲಗುರ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ಸತೀಶ್, ಉಪಾಧ್ಯಕ್ಷ ನಾಗರಾಜು, ಅಕ್ಷರ ದಾಸೋಹ ಅಧಿಕಾರಿ ಬಿ.ರೇಣುಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ರೆಡ್ಡಪ್ಪ ಮತ್ತಿತರರು ಪಾಲ್ಗೊಂಡಿದ್ದರು.