Chikkaballapur : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram Cafe) ನಡೆದ ಬಾಂಬ್ ಸ್ಫೋಟ (Bomb Blast) ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ ಮತ್ತು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು (BJP) ಮತ್ತು ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಮುಖಂಡರು ಬುಧವಾರ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ (Protest) ನಡೆಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ ಪ್ರತಿಭಟನೆಯಲ್ಲಿ ಮಾತನಾಡಿ “ಕಾಂಗ್ರೆಸ್ ಸರ್ಕಾರ ಅಂಗೈ ಹುಣ್ಣಿಗೆ ಕನ್ನಡಿಬೇಕೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ. ಸ್ಫೋಟ ನಡೆಸುವುದಾಗಿ ಇ–ಮೇಲ್ ಸಹ ಮಾಡಿದ್ದು ಇದರಿಂದ ರಾಜ್ಯದಲ್ಲಿ ಆಂತಕದ ಸ್ಥಿತಿ ಉಂಟಾಗಿದೆ. ಕಾಂಗ್ರೆಸ್ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಚುನಾವಣೆಯ ದೃಷ್ಟಿಯಿಂದ ಈ ಕೆಲಸ ಮಾಡುತ್ತಿದೆ. ಇದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರೆ ಕರ್ನಾಟಕದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವರು” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಶಿಡ್ಲಘಟ್ಟ ಮಾಜಿ ಶಾಸಕ ರಾಜಣ್ಣ, ನಗರ ಘಟಕದ ಅಧ್ಯಕ್ಷ ಬಿ.ವಿ. ಆನಂದ್, ಮುಖಂಡರಾದ ಕೆ.ವಿ.ನಾಗರಾಜ್, ಬೈರೇಗೌಡ, ಲಕ್ಷ್ಮಿನಾರಾಯಣ ಗುಪ್ತ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.