Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಗಣರಾಜ್ಯೋತ್ಸವ ದಿನಾಚರಣೆಯ (Republic Day) ಕುರಿತು ಪೂರ್ವಭಾವಿ ಸಭೆಯನ್ನು (Preliminary Meeting) ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರರವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಭಾರವನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಂಚಿಕೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು “ಜನವರಿ 26ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಜಿಲ್ಲಾಡಳಿತದಲ್ಲಿ ಜರುಗುವ ಧ್ವಜಾರೋಹಣಕ್ಕೆ ಹಾಗೂ ಕ್ರೀಡಾಂಗಣಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು” ಎಂದು ತಿಳಿಸಿದರು.
ಸಭೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ ಹಿಮಾಮ್ ಖಾತಿಂ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುರೇಣುಕ, ಜಿಲ್ಲಾ, ತಾಲೂಕು ಮಟ್ಟದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.