Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda) ನೇತೃತ್ವದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ (
Revenue Department Progress Review Meeting) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ “: ಬರಪೀಡಿತ ತಾಲೂಕುಗಳಲ್ಲಿ ಅಧಿಕಾರಿಗಳು ಸೆ.30ರೊಳಗೆ ಬೆಳೆ ಸಮೀಕ್ಷೆ ನಡೆಸಿದರೆ ಮಾತ್ರ ರೈತರಿಗೆ ಬೆಳೆ ನಷ್ಟ ತುಂಬಿಕೊಡಲು ಸಾಧ್ಯ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕೆಲಸ ಪ್ರಗತಿಯಲ್ಲಿದೆ. ತಹಶೀಲ್ದಾರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ರೈತನ ಬೆಳೆ ಸಮೀಕ್ಷೆ ನಡೆಸಿ ಆನ್‌ಲೈನ್ ಮೂಲಕ ದಾಖಲಿಸಬೇಕು. ಆಗಮಾತ್ರ ರೈತರಿಗೆ ನ್ಯಾಯಯುತ ಬೆಳೆ ನಷ್ಟ ಪರಿಹಾರ ನೀಡಲು ಸಾಧ್ಯ. ಬರ ಪೀಡಿತ ತಾಲ್ಲೂಕು ಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆ ಒಳಗಾಗಿ ಟ್ಯಾಂಕರ್ ಅಥವಾ ಇತರ ವ್ಯವಸ್ಥೆ ಮೂಲಕ ನೀರು ಪೂರೈಸ ಬೇಕು. ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ಪ್ರಾಶಸ್ತ್ಯ ನೀಡಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ಶೀಘ್ರದಲ್ಲೇ ವಿಲೇವಾರಿ ಮಾಡಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಆಯುಕ್ತ ಸುನಿಲ್ ಕುಮಾರ್, ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ್, ಶಾಸಕರಾದ ಕೆ.ಎಚ್.ಪುಟ್ಟಸ್ವಾಮಿ ಗೌಡ, ರವಿಕುಮಾರ್, ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ,ಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಡಿ.ಎಲ್.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.