Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ನೇತೃತ್ವದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ (Second PUC Examination) ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳ ಪೂರ್ವಭಾವಿ ಸಭೆ (Preliminary Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ “ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 13,819 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ಗೋಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯ ಅಭಿರಕ್ಷೆಯಲ್ಲಿಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ವೆಬ್ ಕಾಸ್ಟಿಂಗ್ ಕಾರ್ಯವನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಡಿಯೊ ಕಾನ್ಪರೆನ್ಸ್ ನಡೆಸಲು ಕ್ರಮವಹಿಸಬೇಕು. ಖಜಾನೆಯನ್ನು ಪ್ರವೇಶಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಬಯೋಮೆಟ್ರಿಕ್ ನೋಂದಾಯಿಸಿಕೊಳ್ಳ ಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ, ಡಿವೈಎಸ್‌ಪಿ ಶಿವಕುಮಾರ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ಮಂಜುನಾಥ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಪಾಲ್ಗೊಂಡಿದ್ದರು.