Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ (Chikka Dasarahalli) ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ (Byatarayaswamy Brahma Rathotsava) ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು. ವಿಶೇಷ ಹೂವಿನ ಅಲಂಕಾರ ಮಾಡಿದ್ದ ಬ್ರಹ್ಮರಥೋತ್ಸವದ ತೇರನ್ನು ದೇವಸ್ಥಾನದ ಸುತ್ತಲೂ ಎಳೆದ ಭಕ್ತರು ಬಾಳೆಹಣ್ಣು, ದವನವನ್ನು ತೇರಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಗವಂತನನ್ನು ಕೋರಿಕೊಂಡರು.
ರಥೋತ್ಸವಕ್ಕೆ ತಹಶೀಲ್ದಾರ್ ಬಿ.ಎಸ್.ರಾಜೀವ್ ಚಾಲನೆ ನೀಡಿದರು. ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು. ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು.
ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.