Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ (Cheemangala) ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ EO ಮುನಿರಾಜು ಅವರು ಸ್ವಚ್ಛತೆ, ಸರಳತೆ, ಸಮಾನತೆ, ಸೌಹಾರ್ಧತೆಯನ್ನು ಪಾಲಿಸುವ ಮೂಲಕ ನಾವುಗಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅರ್ಥಪೂರ್ಣಗೊಳಿಸಬಹುದು ಎಂದು ತಿಳಿಸಿದರು.
ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು. ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದರು.
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಅಂಗವಾಗಿ ಹಾಗೂ ಸ್ವಚ್ಛತಾ ಹಿ ಸೇವಾ ಅಭಿಯಾನದ ಜಾಗೃತಿ ಮೂಡಿಸುವ ಸಲುವಾಗಿ ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರಮದಾನ ಮಾಡಲಾಯಿತು. ನೂತನವಾಗಿ ನಿರ್ಮಾಣಗೊಂಡ ಸರ್ಕಾರಿ ಪ್ರೌಢ ಶಾಲೆಯ ಶೌಚಾಲಯವನ್ನು ಉದ್ಘಾಟಿಸಲಾಯಿತು. ಹೋಬಳಿಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷೆ ಸುಮಿತ್ರಾ ಮಂಜುನಾಥ್, ಪಿಡಿಓ ತನ್ವೀರ್ ಅಹ್ಮದ್, ಸದಸ್ಯರು ಹಾಗೂ ಸಿಬ್ಬಂದಿ, ಮುಖ್ಯ ಶಿಕ್ಷಕ ಶಿವಶಂಕರ್ ಹಾಗೂ ಶಿಕ್ಷಕರು ಹಾಜರಿದ್ದರು.