Sidlaghatta : ಜನಸಾಮಾನ್ಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹರಿಗೆ ಪಾರದರ್ಶಕವಾಗಿ ಈ ಯೋಜನೆಗಳು ತಲುಪಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜ್ಯ ಕಟ್ಟಡ ಮತ್ತಿ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಡೆದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಎಲೆಕ್ಟ್ರೀಷಿಯನ್ ಕಿಟ್ ಮತ್ತು ವೆಲ್ಡಿಂಗ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರ ತೆರಿಗೆ ಹಣದಲ್ಲಿ ಈ ಜನಪರ ಯೋಜನೆಗಳು ನಡೆಯುತ್ತಿರುವುದರಿಂದ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕವಾಗಿ ಫಲಾನುಭವಿಗಳ ಆಯ್ಕೆ ಮಾಡಬೇಕು. ಈ ಯೋಜನೆಗಳ ಕುರಿತಾಗಿ ಜನಸಾಮಾನ್ಯರಿಗೆ ತಿಳಿವಳಿಕೆ ಸಹ ಮೂಡಿಸಬೇಕು ಎಂದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಯೋಜನೆ ಸಿಗಲು ಅವರು ಮೊದಲು ನೋಂದಣಿ ಮಾಡಿಸಿಕೊಳ್ಳಬೇಕು. ಇ ಶ್ರಮ್ ಯೋಜನೆಗೆ ಕಟ್ಟಡ ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಕೃಷಿ ಕಾರ್ಮಿಕರು, ಚಾಲಕರು, ಮನೆಗೆಲಸದವರು ಸೇರಿ 379 ವರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಒಳಪಡುವುದರಿಂದ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ನೋಂದಾಯಿತ 120 ಕಾರ್ಮಿಕರಿಗೆ ಎಲೆಕ್ಟ್ರೀಷಿಯನ್ ಕಿಟ್ ಮತ್ತು 25 ಮಂದಿ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ತಾದೂರು ರಘು, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ವಿಜಯೇಂದ್ರ, ಮರಕೆಲಸ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ ದೀಪು, ಎಲೆಕ್ಟ್ರಿಷಿಯನ್ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್, ವೆಲ್ಡಿಂಗ್ ಸಂಘದ ಮಹಬಬೂಬ್ ಪಾಷಾ ಹಾಜರಿದ್ದರು.