Sidlaghatta : ರೈತರು ಸರ್ಕಾರದಿಂದ ಸಿಗುವ ವಿವಿಧ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಶನಿವಾರ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪಂಪು ಮೋಟರ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಸರ್ಕಾರದ ಅನುದಾನ ಹಾಗೂ ಸೌಲಭ್ಯಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ದಿಬ್ಬೂರಹಳ್ಳಿ, ಚಿಲಕಲನೇರ್ಪು ಭಾಗದ ಹಿಂದುಳಿದ ಜನತೆಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಗಮನ ಹರಿಸಬೇಕು,” ಎಂದು ಅವರು ಒತ್ತಿ ಹೇಳಿದರು.
“ರಾಜ್ಯದ ಜನತೆ ತೆರಿಗೆ ರೂಪದಲ್ಲಿ ಪಾವತಿಸುವ ಹಣದಿಂದ ಸರ್ಕಾರ ರೂಪಿಸುವ ಯಾವುದೇ ಯೋಜನೆಯು ಯಶಸ್ವಿಯಾಗಬೇಕಾದರೆ, ಅದು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಇದನ್ನು ಖಾತ್ರಿಗೊಳಿಸುವ ಜವಾಬ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲಿದೆ,” ಎಂದರು.
“ನಿಗಮದಲ್ಲಿ ಇರುವ ಲೋಪದೋಷಗಳನ್ನು ಕೆದಕುವುದರ ಮೂಲಕ ಅಭಿವೃದ್ಧಿ ಸಾಧ್ಯವಿಲ್ಲ. ನನ್ನ ಅವಧಿಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ಹೇಳಿದರು.
ಈ ಕಾರ್ಯಕ್ರಮದ ಅಂಗವಾಗಿ ಸುಮಾರು 20 ಫಲಾನುಭವಿಗಳಿಗೆ ಪಂಪು ಮೋಟರ್ ಮತ್ತು ಕೇಬಲ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಮುಖಂಡರಾದ ನಂದನವನಂ ಶ್ರೀರಾಮರೆಡ್ಡಿ, ತಾದೂರು ರಘು, ಮೇಲೂರು ಮಂಜುನಾಥ್, ಮುಗಲಡಪಿ ನಂಜಪ್ಪ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಂಜನ್‌ಕುಮಾರ್, ಗುತ್ತಿಗೆದಾರ ಮುನಿರಾಜು ಮತ್ತಿತರರು ಭಾಗವಹಿಸಿದ್ದರು.