Sidlaghatta : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವುದು ತಳಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಸಹಾಯವಾಗಲಿದೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಅಭಿಪ್ರಾಯಪಟ್ಟರು.
ನಗರದಲ್ಲಿರುವ ಬಿಜೆಪಿಯ ಸೇವಾ ಸೌಧ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರು, ಮುಖಂಡರು, ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ಭಕ್ತರಹಳ್ಳಿ, ಮಳಮಾಚನಹಳ್ಳಿ, ನಾಗಮಂಗಲ ಹಾಗೂ ಹೊಸಪೇಟೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದನ್ನು ಅವರು ಗಮನ ಸೆಳೆದರು. ಇದೇ ಮೊದಲ ಬಾರಿಗೆ ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದು ಪಕ್ಷದ ಪ್ರಾಬಲ್ಯವನ್ನು ಸೂಚಿಸುತ್ತದೆ ಎಂದು ಹೇಳಿದರು.
ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಪರಿಚಯಿಸಿ, ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹರಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಗ್ರಾಮ ಪಂಚಾಯಿತಿಗಳಲ್ಲಿ ಬಲ ಹೆಚ್ಚಿದರೆ, ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಇದು ಸಹಾಯಕವಾಗಲಿದೆ ಎಂದು ತಿಳಿಸಿದರು.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಥವಾ ಪ್ರತ್ಯೇಕ ಸ್ಪರ್ಧೆಯ ಕುರಿತು ಕೇಂದ್ರ ನಾಯಕರ ನಿರ್ಧಾರದ ಮೇರೆಗೆ ಕಾರ್ಯಚರಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ಚುನಾವಣೆಯ ತಂತ್ರಗಳು ಮತ್ತು ಪ್ರಚಾರ ಯುದ್ಧತಂತ್ರಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ತಾದೂರು ರಮೇಶ್, ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಕ್ಷೇತ್ರದ ಅಭ್ಯರ್ಥಿಗಳು ಭಾಗವಹಿಸಿದರು.