Sidlaghatta : ಮಾನವ ಕಳ್ಳಸಾಗಣೆ ಮಾಡುವವರಿಗೆ 7 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ಕಾನೂನಿನ ಮೂಲಕವೇ ಈ ಜಾಲ ನಿಗ್ರಹಿಸಲು ಸಾಧ್ಯವಾಗುವುದಿಲ್ಲ. ಸರ್ಕಾರೇತರ ಸಂಘ-ಸಂಸ್ಥೆಗಳು ಮತ್ತು ಸೇವಾ ಮನೋಭಾವ ಹೊಂದಿದ ಜನರ ಬೆಂಬಲದ ಅಗತ್ಯವಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜ.ಜೆ ತಿಳಿಸಿದರು.
ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಸಾಂತ್ವನ ಕೇಂದ್ರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನವ ಕಳ್ಳಸಾಗಣೆ ಬಗ್ಗೆ ಜನಜಾಗೃತಿ ಮೂಡಿಸುವ ಅಗತ್ಯವಿದೆ. ಸಾಮಾನ್ಯವಾಗಿ ಉದ್ಯೋಗ ಗಿಟ್ಟಿಸುವ ಅಥವಾ ಹೇಗಾದರೂ ಬದುಕು ಕಟ್ಟಿಕೊಳ್ಳುವ ಭರವಸೆಯಲ್ಲಿ ಜನರು ಸುಲಭವಾಗಿ ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ ಎಂದರು.
ಹೆಣ್ಣುಮಕ್ಕಳು ಲೈಂಗಿಕ ಶೋಷಣೆಗೆ ಸಂಬಂಧಿಸಿದ ಕಳ್ಳಸಾಗಣೆ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಬಲವಂತದ ಗುಲಾಮಗಿರಿಗೆ ಅನಾಥ ಮತ್ತು ಬಡಕುಟುಂಬದ ಮಕ್ಕಳು, ಅಂಗಾಂಗ ದಂಧೆಗೆ ಅಸಹಾಯಕ ವೃದ್ಧರು ಗುರಿಯಾಗುತ್ತಿದ್ದಾರೆ. ಕಳ್ಳಸಾಗಣೆಗೆ ಸಿಲುಕುವ ಜನರ ಬದುಕು ಬಹುಬೇಗ ಛಿದ್ರವಾಗುತ್ತದೆ ಎಂದು ನುಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ವಿದ್ಯಾ ಎ.ವಸ್ತ್ರದ್ ಮಾತನಾಡಿ, ಮಾನವ ಕಳ್ಳ ಸಾಗಣೆ ತಡೆಗಟ್ಟಲು ಎಲ್ಲ ಇಲಾಖೆಗಳ ಸಹಭಾಗಿತ್ವದ ಜೊತೆಗೆ, ಬದ್ಧತೆ ಅವಶ್ಯಕತೆ ಇದೆ. ಮಾನವ ಕಳ್ಳ ಸಾಗಣೆ ತಡೆಗಟ್ಟುವ ಕುರಿತು ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಹಾಗೂ ಮೇಲ್ವಿಚಾರಕಿಯರು ಸಹಕರಿಸಬೇಕು ಎಂದರು.
ಸಂಪನ್ಮೂಲ ಭಾಷಣಕಾರರಾದ ವಕೀಲೆ ಕೆ.ಎಂ.ನಾಗಮಣಿ ಮಾತನಾಡಿ, ಮಾನವ ಕಳ್ಳಸಾಗಣೆ ಕಾನೂನುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಜಿ.ಭಾಸ್ಕರ್ ಅವರು ಮಾನವ ಕಳ್ಳ ಸಾಗಣೆ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಶಿಡ್ಲಘಟ್ಟ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ ಹಾಜರಿದ್ದರು.